ವಿವಿಧ ಕ್ಷೇತ್ರಗಳಲ್ಲಿ ಮುಂದುವರೆಯಲು ಸಾಕಷ್ಟು ಅವಕಾಶಗಳಿವೆ. ಸರ್ಕಾರವೇ ಎಲ್ಲರಿಗೂ ಜಾತಿ ಧರ್ಮ ಪಕ್ಷದ ತಾರತಮ್ಯ ಇಲ್ಲದೆ ಅವಕಾಶಗಳನ್ನು ನಾನಾ ರೂಪದಲ್ಲಿ ಒದಗಿಸಿಕೊಟ್ಟಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ನಡಿಪಿನಾಯಕನಹಳ್ಳಿಯಲ್ಲಿ ಜಿಲ್ಲಾಡಳಿತದ ನಡಿಗೆ ಹಳ್ಳಿಯ ಕಡೆಗೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಭೆ ಎಂಬುದು ಮುಖ್ಯ, ಪ್ರತಿಭೆಯಿದ್ದವರಿಗೆ ಸಮಾಜದಲ್ಲಿ ಸಾಕಷ್ಟು ಅವಕಾಶಗಳಿವೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುಂದುವರೆಯಬೇಕೆಂದು ಹೇಳಿದರು.
ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಗ್ರಾಮಸ್ಥರ ಮನವಿಗೆ ಕಷ್ಟಗಳಿಗೆ ಸ್ಪಂದಿಸಬೇಕು, ಸರ್ಕಾರದ ಎಲ್ಲ ಸವಲತ್ತುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗುವಂತೆ ಮಾಡಬೇಕೆಂದು ಕೋರಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ನಾನಾ ಪಿಂಚಣಿ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಹಾಗೆಯೆ ನಾನಾ ಇಲಾಖೆಯ ಸವಲತ್ತುಗಳನ್ನು ವಿತರಿಸಲಾಯಿತು. ಕೆರೆ ಹೂಳೆತ್ತುವ ಕಾಮಗಾರಿಗೆ ಚಲನೆ ನೀಡಲಾಯಿತು.
ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕುರಿತು ಸೊಪ್ಪು ತರಕಾರಿ ಹಣ್ಣು ಹಂಪಲು ಕಾಳುಗಳ ಪ್ರದರ್ಶನದ ಮೂಲಕ ಅರಿವು ಮೂಡಿಸಲಾಯಿತು. ತಹಶೀಲ್ದಾರ್ ರಾಜೀವ್, ಇಒ ಚಂದ್ರಕಾಂತ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಗಳು ಹಾಜರಿದ್ದರು.