ಸುತ್ತಲೂ ಏಳು ಬೆಟ್ಟಗಳು. ನಡುವೆ ಮೂರು ಕೆರೆಗಳು. ಮೊದಲ ಕೆರೆಯ ಕಟ್ಟೆಯ ಮೇಲೆ ಪುರಾತನ ಬೇವಿನ ಮರಗಳ ಸಾಲು. ಅವುಗಳಲ್ಲಿ ಒಂದು ಇನ್ನೂರು ವರ್ಷಕ್ಕೂ ಹಳೆಯದು. ಇದು ಕಥೆಯಲ್ಲ. ಮಲೆನಾಡಿನ ಪ್ರದೇಶವೊಂದರ ವರ್ಣನೆಯೂ ಅಲ್ಲ. ತಾಲ್ಲೂಕಿನ ಸಾದಲಿ ಹೋಬಳಿಯ ಎಸ್.ವೆಂಕಟಾಪುರದ ಬಳಿಯಿರುವ ಸುಂದರ ದೃಶ್ಯವಿದು.
ಇನ್ನೂರು ವರ್ಷಗಳ ಇತಿಹಾಸ ಹೊಂದಿರುವ ಬೇವಿನ ಮರ ಸಾಮಾನ್ಯವಾದುದ್ದೇನಲ್ಲ. ಜೈವಿಕ ವಿಜ್ಞಾನ ವೈವಿಧ್ಯ ಕಾಯ್ದೆ 2002ರ ಕಾಲಂ 63(2)(G) ಅನ್ವಯ ಕರ್ನಾಟಕ ಜೀವ ವೈವಿಧ್ಯ ಮಂಡಳಿಯೂ ಪರಂಪರೆ ಮರಗಳು (ಹರಿಟೇಜ್ ಟ್ರೀಸ್) ಎಂದು ಆಯ್ದುಕೊಂಡಿರುವ ರಾಜ್ಯದ ಹತ್ತು ಮರಗಳಲ್ಲಿ ಈ ವಿಶಿಷ್ಟ ರೀತಿಯ ಮರವೂ ಒಂದು. ಬಯಲುಸೀಮೆ ಮತ್ತು ಬರಡು ಸೀಮೆ ಎಂದು ಕರೆಯಲ್ಪಡುವ ಜಿಲ್ಲೆಯಲ್ಲಿ ಈ ಅಪರೂಪದ ಮರ ಇರುವುದು ವಿಶೇಷ.
ಸುಮಾರು ಇಪ್ಪತ್ತು ಅಡಿ ಸುತ್ತಳತೆ ಹೊಂದಿರುವ ಈ ಮರವು ಎಸ್.ವೆಂಕಟಾಪುರ, ಪೂಸಗಾನದೊಡ್ಡಿ, ನೇರಳೇಮರದಹಳ್ಳಿ ಮತ್ತು ಎಸ್.ಗೊಲ್ಲಹಳ್ಳಿ ಎಂಬ ನಾಲ್ಕು ಗ್ರಾಮಗಳಿಗೆ ಸೇರಿದೆ. ಕೆರೆ ಕಟ್ಟೆಯು ಬೆಟ್ಟಗಳ ನಡುವೆ ನಿರ್ಮಾಣಗೊಂಡಿದೆ. ಎಸ್.ವೆಂಕಟಾಪುರ ಗ್ರಾಮದ ಗದ್ದೆಗಳಿಗೆ ಈ ಕೆರೆಯೇ ನೀರಿನ ಮೂಲ. ಈ ಪರಂಪರೆಯ ವೃಕ್ಷದೊಂದಿಗೆ ಇನ್ನೂ ಹತ್ತು ಬೃಹತ್ ಗಾತ್ರದ ಬೇವಿನ ಮರಗಳಿವೆ. ಸುತ್ತಲೂ ಹೊಂಗೆ ತೋಪಿದೆ. ವೃಕ್ಷದ ಕೆಳಗೆ ಮುನೇಶ್ವರನ ಪುಟ್ಟ ದೇಗುಲವಿದೆ. ಆದರಿಂದಲೇ ಈ ಕಟ್ಟೆಗೆ ಮುನಿಯಪ್ಪನ ಕಟ್ಟೆ ಎಂದು ಕರೆಯಲಾಗುತ್ತದೆ. ಇಲ್ಲಿ ಗಂಗಮ್ಮ ಮತ್ತು ಅಕ್ಕಯ್ಯಗಾರು ಹೆಸರಿನ ಪುಟ್ಟ ಗುಡಿಗಳೂ ಇವೆ. ದೇಗುಲದ ಮುಂಭಾಗದಲ್ಲಿ ದೇವಕಣಿಗಲೆ ಮರವಿದೆ. ಕಟ್ಟೆಯ ಬಲಭಾಗದಲ್ಲಿ ಬಿಲ್ಲುಬಾಣಗಳನ್ನು ಹಿಡಿದಿರುವ ಮೂವರು ವೀರರ ವೀರಗಲ್ಲು ಇದೆ. ಎಷ್ಟೇ ಬಿರುಬಿಸಿಲಿದ್ದರೂ ಈ ಪ್ರದೇಶ ಮಾತ್ರ ಸದಾ ತಂಪಾಗಿರುತ್ತದೆ.
‘ಪ್ರತಿ ಮಂಗಳವಾರ ಮತ್ತು ಶುಕ್ರವಾರ ದೇವರ ಪೂಜೆಗಾಗಿ ಇಲ್ಲಿ ಜನ ಸೇರುತ್ತಾರೆ. ಪ್ರತಿ ವರ್ಷ ಏಪ್ರಿಲ್‌ನಲ್ಲಿ ನಾಲ್ಕೂ ಗ್ರಾಮಗಳ ಜನರು ಜಾತ್ರೆ ನಡೆಸುತ್ತಾರೆ. ಇಷ್ಟಾರ್ಥಗಳು ನೆರವೇರುತ್ತವೆ ಎಂಬ ನಂಬಿಕೆಯಿಂದ ಅನೇಕ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕಟ್ಟೆಯ ಮೇಲಿರುವ ಮರಗಳ ಕಟ್ಟಿಗೆಗಳನ್ನು ಯಾರೂ ತೆಗೆದುಕೊಂಡು ಹೋಗಬಾರದು. ಕೆಡುಕಾಗುತ್ತದೆ ಎಂಬ ನಂಬಿಕೆಯು ಹಲವು ಜನರಲ್ಲಿದೆ’ ಎಂದು ದೇವಾಲಯದ ಅರ್ಚಕ ಗುರುಮೂರ್ತಿ ತಿಳಿಸಿದರು.
‘ಏಳು ಬೆಟ್ಟಗಳನ್ನೂ ನಲ್ಲಕೊಂಡಲು ಎಂದು ಕರೆಯುತ್ತಾರೆ. ಇಲ್ಲಿರುವ ಮೂರು ಕೆರೆಗಳನ್ನು ಮೂವರು ವೇಶ್ಯೆಯರು ಕಟ್ಟಿಸಿದ್ದು, ತಿಪ್ಪಸಾನಿಕೆರೆ, ರಾಜಸಾನಿಕೆರೆ ಮತ್ತು ನಲ್ಲಸಾನಿಕೆರೆ ಎಂದು ಅವರ ಹೆಸರಿನಿಂದಲೇ ಕರೆಯಲ್ಪಡುತ್ತವೆ. ಈ ಬೆಟ್ಟಗಳಲ್ಲಿ ಚಿರತೆ, ಜಿಂಕೆ, ಮೊಲ, ಕರಡಿ, ನರಿ ಮುಂತಾದ ಪ್ರಾಣಿಗಳು ಇದ್ದವು. ತಿಪ್ಪಸಾನಿಕೆರೆ ಅಥವಾ ತಿಪ್ಪರಾಸಕೆರೆಯ ಕಟ್ಟೆಯ ಮೇಲಿರುವ ಬೇವಿನ ಮರಗಳನ್ನು ನಾನು ಚಿಕ್ಕಂದಿನಿಂದಲೇ ನೋಡಿದ್ದೇನೆ. ಕೆರೆಗಳನ್ನು ಕಟ್ಟಿದ ಮಹಾತಾಯಂದಿರೆ ಇವನ್ನೂ ನೆಟ್ಟಿರಬೇಕು’ ಎನ್ನುತ್ತಾರೆ ಗ್ರಾಮದ ೯೪ರ ವಯೋವೃದ್ಧ ನರಸರಾಮಪ್ಪ.
‘ಇಲ್ಲಿ ಸುತ್ತ ಇರುವ ಬೆಟ್ಟಗಳೆಲ್ಲ ಚಾರಣಕ್ಕೆ ಯೋಗ್ಯವಾಗಿವೆ. ಒಂದೊಂದರಲ್ಲೀ ಒಂದೊಂದು ವಿಶೇಷವಿದೆ. ಪರಂಪರೆ ವೃಕ್ಷವೆಂದು ಸರ್ಕಾರ ಹೆಸರಿಸಿರುವುದರಿಂದ ಪ್ರವಾಸೋದ್ಯಮ ಇಲಾಖೆ ಸೂಕ್ತವಾಗಿ ಕೆಲಸ ಮಾಡಿದರೆ ಈ ಪ್ರದೇಶದ ಅಭಿವೃದ್ಧಿ ಮತ್ತು ಸಂರಕ್ಷಣೆಯಾಗುತ್ತದೆ. ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ. ತಾಲ್ಲೂಕಿನ ಮೂಲೆಯಲ್ಲಿರುವ ಈ ಪ್ರದೇಶ ಮುಂದುವರೆಯಲು ಸಾಧ್ಯವಾಗುತ್ತದೆ’ ಎಂದು ಹಿರಿಯ ಶಿಕ್ಷಕ ಕೆ.ಎನ್.ಲಕ್ಷ್ಮೀನರಸಿಂಹಯ್ಯ ಹೇಳಿದರು.
- Advertisement -
- Advertisement -
- Advertisement -
- Advertisement -