ಸಾರ್ವಜನಿಕರು ಪ್ಲಾಸ್ಟಿಕ್ ಬಳಸುವುದನ್ನು ಸಂಪೂರ್ಣ ನಿಲ್ಲಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ವರ್ತಕರು ನಮ್ಮೊಂದಿಗೆ ಕೈ ಜೋಡಿಸಿದ್ದು ನಾಗರಿಕರೂ ಸಹ ಪ್ಲಾಸ್ಟಿಕ್ ಬಳಸದೇ ಇರಲು ಸಂಕಲ್ಪ ಮಾಡಬೇಕು ಎಂದು ನಗರಸಭೆ ಆಯುಕ್ತ ಜಿ.ಎನ್.ಚಲಪತಿ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಮಾಂಸದ ಅಂಗಡಿಗಳು, ತರಕಾರಿ ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು ೪ ಟನ್ ನಷ್ಟು ಪ್ಲಾಸ್ಟಿಕ್ ವಶಪಡಿಸಿಕೊಂಡು ಅವರು ಮಾತನಾಡಿದರು.
ತಾಲ್ಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಸುಮಾರು ಒಂದು ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಮಂಗಳವಾರ ಬೆಳಗ್ಗೆ ಚಾಲನೆ ನೀಡಲಾಗಿದೆ. ಜೊತೆಗೆ ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಮೂರು ತಂಡಗಳನ್ನು ರಚಿಸಿ ನಗರದ ಪ್ರತಿಯೊಂದು ಅಂಗಡಿಗೂ ಭೇಟಿ ನೀಡಿ ಅಲ್ಲಿರುವ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಈಗಾಗಲೇ ಸಾಕಷ್ಟು ಬಾರಿ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಲಾಗಿದ್ದರೂ ಲೆಕ್ಕಿಸದೇ ಬಳಸುತ್ತಿರುವ ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಜೊತೆಗೆ ಅಂತಹವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ನಗರದ ಸಾರ್ವಜನಿಕರೂ ಸಹ ಈ ಕಾರ್ಯಕ್ಕೆ ಕೈ ಜೋಡಿಸುವ ಮೂಲಕ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ಸಂಕಲ್ಪ ಮಾಡಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲು ಸಾಧ್ಯವಾಗುತ್ತದೆ ಎಂದರು.
ದಾಳಿಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಆಂಜಿನಪ್ಪ, ಸಯೀದಾ, ಪರಿಸರ ಅಭಿಯಂತರ ದಿಲೀಪ್ ಭಾಗವಹಿಸಿದ್ದರು.
- Advertisement -
- Advertisement -
- Advertisement -
- Advertisement -