ಸರ್ಕಾರದಿಂದ ಬಿಡುಗಡೆಯಾಗುತ್ತಿರುವ ಅನುದಾನಗಳ ಬಳಕೆಯ ಕುರಿತು ಕೈಗೊಂಡಿರುವ ಕ್ರಮದ ಸಂಪೂರ್ಣ ಮಾಹಿತಿಯನ್ನು ತ್ವರಿತವಾಗಿ ತಲುಪಿಸಿ ಎಂದು ಶಾಸಕ ಎಂ.ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕ್ಷೇತ್ರದಾದ್ಯಂತ ಜಿಲ್ಲಾ ಪಂಚಾಯಿತಿ ತಾಂತ್ರಿಕ ಉಪ ವಿಭಾಗದಿಂದ ತ್ವರಿತವಾಗಿ ಕಾಮಗಾರಿಗಳನ್ನು ಮುಗಿಸಬೇಕು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಬ್ಯಾಕ್ ಲಾಗ್ ಹಾಗೂ ಹಾಲಿ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಮುಂದಿನ ಫೆಬ್ರುವರಿ ೧೫ ರೊಳಗೆ ಈ ಎಲ್ಲಾ ಕಾಮಗಾರಿಗಳ ಟೆಂಡರ್ ಕರೆದು ಕಾಮಗಾರಿ ಶುರು ಮಾಡಿಸುವ ಜೊತೆಗೆ ಕಾಮಗಾರಿಯ ನಾಮಫಲಕಗಳನ್ನು ಅಳವಡಿಸಬೇಕು ಎಂದರು.
ಕ್ಷೇತ್ರದ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಸರ್ಕಾರಿ ಬಸ್ ಸಂಚರಿಸುತ್ತಿಲ್ಲ. ಹೀಗಾಗಿ ಗ್ರಾಮೀಣ ಪ್ರದೇಶದ ಜನತೆ ಹಾಗೂ ವಿದ್ಯಾರ್ಥಿಗಳು ಪರದಾಡುವ ಸ್ಥಿತಿಯಿದೆ. ಕೂಡಲೇ ಸಾರಿಗೆ ಇಲಾಖೆಯ ಅಧಿಕಾರಿಗಳು ನಾಗರಿಕರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಿ ಎಲ್ಲಿ ಸಮಸ್ಯೆ ಇದೆಯೋ ಎನ್ನುವುದನ್ನು ತಿಳಿದುಕೊಂಡು ಆ ಭಾಗಕ್ಕೆ ಬಸ್ ವ್ಯವಸ್ಥೆ ಮಾಡಲು ಮುಂದಾಗಬೇಕು.
ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಈಗಲೇ ಅಧಿಕಾರಿಗಳು ಎಚ್ಚರವಹಿಸಬೇಕು. ನಗರದ ಹೊರವಲಯದ ಅರಣ್ಯ ಇಲಾಖೆಯ ಆವರಣದಲ್ಲಿ ಸುಮಾರು ೪೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಉದ್ಯಾನವನದ ಕಾಮಗಾರಿ ಬಹುತೇಕ ಮುಗಿದಿದ್ದು ಮುಂದಿನ ತಿಂಗಳಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.
ತಾಲ್ಲೂಕು ಪಂಚಾಯಿತಿಯ ಶೇ. ೩ ರ ಅನುದಾನದಲ್ಲಿ ವಿಕಲಚೇತನರಿಗಾಗಿ ಅನುದಾನವಿದ್ದು ಕ್ರಿಯಾಯೋಜನೆ ರೂಪಿಸಿ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಪ್ರಗತಿಯ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಎಂ.ವೆಂಕಟೇಶ್, ಕೆಡಿಪಿ ಸದಸ್ಯ ಪಿ.ವಿ.ನಾಗರಾಜ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -