ಕನ್ನಡಕ್ಕೆ ಮೊಟ್ಟಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ತಹಶೀಲ್ದಾರ್ ಅಜಿತ್ ಕುಮಾರ್ ರೈ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಹಾಗೂ ತಾಲ್ಲೂಕಿನಲ್ಲಿ ನಡೆಸುವ ಜಿಲ್ಲೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಆಚರಿಸುವ ಸಲುವಾಗಿ ನಡೆದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು.
ಡಿಸೆಂಬರ್ 29 ರಂದು ಆಚರಿಸುವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಗೆ ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಬೇಕು. ಕುವೆಂಪು ಅವರ ಭಾವಚಿತ್ರವನ್ನು ಹೊತ್ತ ಮುತ್ತಿನ ಪಲ್ಲಕ್ಕಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಜೊತೆಗೆ ಕಲಾತಂಡಗಳನ್ನು ಕರೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಒಕ್ಕಲಿಗರ ಯುವಸೇನೆ ತಾಲ್ಲೂಕು ಸಂಘದ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ಮಾತನಾಡಿ, ಈ ಪೂರ್ವಭಾವಿ ಸಭೆಗೆ ಗೈರು ಹಾಜರಾದ ಸರ್ಕಾರಿ ಅಧಿಕಾರಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಯಿಸಿದ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರು ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.
ನಗರದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಫ್ರೌಡ ಶಾಲೆಗಳಲ್ಲಿ ಕುವೆಂಪು ಅವರ ಬಗ್ಗೆ ಪ್ರಬಂಧ ಹಾಗೂ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಬೇಕೆಂದು ಕಾರ್ಯಕ್ರಮದಲ್ಲಿ ತೀರ್ಮಾನಿಸಲಾಯಿತು.
ತಾಲ್ಲೂಕಿನಲ್ಲಿ ನಡೆಸುವ ಜಿಲ್ಲೆಯ ದಶಮಾನೋತ್ಸವ ಕಾರ್ಯಕ್ರಮವನ್ನು ನೆಹರೂ ಕ್ರೀಡಾಂಗಣದಲ್ಲಿ ಜನವರಿ 22 ರಂದು ನಡೆಸಲಾಗುವುದು ಎಂದು ತಿಳಿಸಿದ ತಹಶೀಲ್ದಾರ್ ಅಜಿತ್ ಕುಮಾರ್ ರೈ, ವಿವಿಧ ಸರ್ಕಾರಿ ಇಲಾಖೆಗಳ ಮಾಹಿತಿ ನೀಡುವ ಮಳಿಗೆಗಳಿರುತ್ತವೆ, ಸಾವಯವ ಕೃಷಿಕರು ಹಾಗೂ ವಿವಿಧ ಪ್ರದರ್ಶಕರಿಗೂ ಅವಕಾಶ ಕಲ್ಪಿಸಲಾಗುವುದು ಎಂದರು. ಜಾನಪದ ಹಾಗೂ ಸಾಂಸ್ಕೃತಿಕ ಕಲಾ ಪ್ರದರ್ಶನಕ್ಕೂ ವೇದಿಕೆಯಿರುತ್ತದೆ ಎಂದು ತಿಳಿಸಿದರು.
ಗ್ರೇಡ್ ೨ ತಹಶೀಲ್ದಾರ್ ಮುನಿಕೃಷ್ಣಪ್ಪ, ನಗರಸಭಾ ಆಯುಕ್ತ ಛಲಪತಿ, ಬಿ.ಸಿ.ಎಂ ಅಧಿಕಾರಿ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಬಾಬು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಸರ್ಕಲ್ ಇನ್ಸ್ ಪೆಕ್ಟರ್ ಸಿದ್ದರಾಜು. ಎಚ್.ಜಿ.ಗೋಪಾಲಗೌಡ, ನಾರಾಯಣಸ್ವಾಮಿ, ಮೌಲಾ, ತ್ಯಾಗರಾಜ್, ಪ್ರತೀಶ್, ದೇವರಾಜ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -