ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸಮಾಜಸೇವಕ ಪೂಲಕುಂಟಹಳ್ಳಿ ರಘುನಾಥ ರೆಡ್ಡಿ ಅವರಿಂದ ನೀಡಲಾದ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ವಿತರಿಸಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿದರು.
ಕೋವಿಡ್ 19(ಕೊರೊನಾ ವೈರಸ್) ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಕುಟುಂಬದಿಂದ ದೂರವುಳಿದು ತಮ್ಮ ಜೀವವನ್ನು ಪಣಕ್ಕಿಟ್ಟು, ಹಗಲೂ ರಾತ್ರಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸಮಾಜ ಋಣಿಯಾಗಿರಬೇಕು ಎಂದು ಅವರು ತಿಳಿಸಿದರು.
ಇಡೀ ವಿಶ್ವ ಕಷ್ಟಕರ ಸನ್ನಿವೇಶವನ್ನು ಎದುರಿಸುತ್ತಿದೆ. ಆರೋಗ್ಯವೇ ಮಹಾಭಾಗ್ಯ ಎಂಬುದನ್ನು ನಾವೀಗ ಮನಗಾಣಬೇಕಿದೆ. ರೋಗವು ಬರದಿರುವಂತೆ ಎಚ್ಚರಿಕೆ ವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ಜೆಡಿಎಸ್ ಮುಖಂಡ ಪೂಲಕುಂಟ್ಲಹಳ್ಳಿ ರಘುನಾಥರೆಡ್ಡಿ ಮಾತನಾಡಿ, ಜೆಡಿಎಸ್ ಮುಖಂಡ ಬಿ.ಎನ್. ರವಿಕುಮಾರ್ ಅವರ ಮಾರ್ಗದರ್ಶನದಲ್ಲಿ ಗಂಜಿಗುಂಟೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 5 ಗ್ರಾಮ ಪಂಚಾಯಿತಿಗಳ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲು ಯೋಜನೆ ರೂಪಿಸಲಾಗಿದೆ. ನಾವೆಲ್ಲರೂ ಸೌಖ್ಯವಾಗಿರಬೇಕೆಂದು ಆರೋಗ್ಯ ಸಿಬ್ಬಂದಿ ಯೋಧರಂತೆ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಸುರಕ್ಷತೆಗಾಗಿ ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿ, ಪೊಲೀಸ್ ಇಲಾಖೆ, ಪೌರಕಾರ್ಮಿಕರು ಮುಂತಾದವರಿಗೆ ಕಿಂಚಿತ್ ನೆರವಾಗುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಗ್ಲೌಸ್, ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ಎಲ್ಲಾ ಆರೋಗ್ಯ ಸಿಬ್ಬಂದಿಗೆ ನೀಡುವಂತೆ ಕೋರಿ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾ ಶಶಿಕುಮಾರ್, ಸದಸ್ಯ ರಾಜಶೇಖರ್, ಗಂಜಿಗುಂಟೆ ನರಸಿಂಹಮೂರ್ತಿ, ರಾಂಬಾಬು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಅವಿನಾಶ್, ಆರೋಗ್ಯ ಇಲಾಖೆಯ ಅಕ್ಕಲರೆಡ್ಡಿ, ಮುನಿರತ್ನಮ್ಮ, ನಂದಿನಿ, ಗೀತಾ, ಲೋಕೇಶ್, ಕೀರ್ತಿ, ಜನಾರ್ಧನ ಹಾಜರಿದ್ದರು.