ತಾಲ್ಲೂಕಿನ ಶೈಕ್ಷಣಿಕ ಗುಣಮಟ್ಟ ಕಾಪಾಡುವಲ್ಲಿ ಶಿಕ್ಷಕರು ಮತ್ತು ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಖಾಸಗಿ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯಿಂದ ಕಳೆದ ಎರಡೂವರೆ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆಯ ಆರ್‌ಟಿಇ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ಪ್ರಸನ್ನಕುಮಾರ್‌ರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಸೇವೆಯನ್ನು ನಿಸ್ವಾರ್ಥವಾಗಿ ನಿಭಾಯಿಸಿದರೆ ಸಮಾಜದಲ್ಲಿ ಉತ್ತಮ ಗೌರವ ಸಿಗುತ್ತದೆ ಎನ್ನುವುದಕ್ಕೆ ಇಂದಿನ ಕಾರ್ಯಕ್ರಮ ಉದಾಹರಣೆಯಾಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಮನಸ್ಸು ಗೆಲ್ಲುವುದು ತುಂಬಾ ಕಷ್ಟ. ಅಂತಹುದರಲ್ಲಿ ತಮ್ಮ ಎರಡೂವರೆ ವರ್ಷದ ಸೇವಾವಧಿಯಲ್ಲಿ ತಾಲ್ಲೂಕಿನ ಬಹುತೇಕ ಎಲ್ಲಾ ಖಾಸಗಿ, ಅನುದಾನಿತ ಶಾಲೆಗಳ ಆಡಳಿತ ಮಂಡಳಿಯವರ ಮೆಚ್ಚುಗೆಗೆ ಪಾತ್ರರಾಗಿರುವ ಪ್ರಸನ್ನಕುಮಾರ್ ಅಭಿನಂದನಾರ್ಹರು ಎಂದರು.
ಸನ್ಮಾನ ಸ್ವೀಕರಿಸಿದ ಪ್ರಸನ್ನಕುಮಾರ್ ಮಾತನಾಡಿ, ಶಿಡ್ಲಘಟ್ಟದಲ್ಲಿ ಕಳೆದ ೧೬ ವರ್ಷಗಳಿಂದ ಶಿಕ್ಷಕನಾಗಿ ಸೇವೆ ಸಲ್ಲಿಸಿರುವೆ. ಕಳೆದ ಎರಡೂವರೆ ವರ್ಷ ಅವಧಿ ಆರ್‌ಟಿಇ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ನೀಡಿದ ಸಹಕಾರದಿಂದ ಜಿಲ್ಲೆಯಲ್ಲಿ ಶಿಡ್ಲಘಟ್ಟ ಆರ್‌ಟಿಇ ಯೋಜನೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.
ತಮ್ಮ ಸೇವಾವಧಿಯಲ್ಲಿ ತಮಗೆ ಬೆನ್ನೆಲುಬಾಗಿ ನಿಂತಿದ್ದ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಗಳ ಸಹಕಾರ ಮುಂದಿನ ದಿನಗಳಲ್ಲಿಯೂ ಹೀಗೆ ಮುಂದುವರೆಯಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಕಾಸಗಿ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಕೆಲವರು ಮಾತಾಡಿ ಅವಕಾಶವಿದ್ದಲ್ಲಿ ಆರ್‌ಟಿಇ ಸಮನ್ವಯಾಧಿಕಾರಿಯಾಗಿ ಪ್ರಸನ್ನಕುಮಾರ್ ಅವರನ್ನೇ ಮುಂದುವರೆಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ ಮನವಿ ಮಾಡಿದರು.
ಬಿಆರ್‌ಸಿ ರವೀಂದ್ರ, ವಿಸ್ಡಂ ಶಾಲೆಯ ನಾಗರಾಜ್, ಡಾಲ್ಫಿನ್ ವಿದ್ಯಾಸಂಸ್ಥೆಯ ಅಶೋಕ್, ಬಿಜಿಎಸ್ ವಿದ್ಯಾಸಂಸ್ಥೆಯ ಲೋಕೇಶ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -