Home News ಉಚಿತ ಆಂಬ್ಯುಲೆನ್ಸ್ ಸೇವೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

ಉಚಿತ ಆಂಬ್ಯುಲೆನ್ಸ್ ಸೇವೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

0

ಮುಂದಿನ ಚುನಾವಣೆಯಲ್ಲಿ ರಾಜ್ಯದ ಚುಕ್ಕಾಣಿಯನ್ನು ಜೆಡಿಎಸ್ ಪಕ್ಷ ಹಿಡಿಯಬೇಕು, ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎನ್ನುವ ನಿಟ್ಟಿನಲ್ಲಿ ಟ್ರಸ್ಟ್ ಮೂಲಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮೇಲೂರು ಬಿ.ಎನ್‌.ರವಿಕುಮಾರ್‌ ತಿಳಿಸಿದರು.
ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪರ ೫ ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಜಂಗಮಕೋಟೆಯಲ್ಲಿ ಉಚಿತ ಆಂಬ್ಯುಲೆನ್ಸ್ ಸೇವೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಹಾಗು ಗರ್ಭಿಣಿ ಮಹಿಳೆಯರಿಗೆ ಆರ್ಥಿಕ ಸಹಾಯಧನ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪ ರವರು ಹಾಕಿಕೊಟ್ಟ ರಾಜಕೀಯ ಹಾದಿಯಲ್ಲಿ ಕಳೆದ ಹತ್ತು ವರ್ಷಗಳಿಂದ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಅಭಿವೃದ್ಧಿಗಾಗಿ ತನು, ಮನ, ಧನ ಅರ್ಪಿಸಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿದ್ದೇವೆ. ಮುಂಬರುವ ದಿನಗಳಲ್ಲಿ ಅದನ್ನು ಮತ್ತಷ್ಟು ಗಟ್ಟಿಗೊಳಿಸುವ ಕೆಲಸವನ್ನು ಟ್ರಸ್ಟ್ ಮೂಲಕ ಮಾಡಲಾಗುವುದು. ಜಂಗಮಕೋಟೆ ಹೋಬಳಿಯ ನಾಗರಿಕರ ತುರ್ತು ಆರೋಗ್ಯ ಸೇವೆಗಾಗಿ ಒಂದು ಆಂಬುಲೆನ್ಸ್ ಟ್ರಸ್ಟ್ ವತಿಯಿಂದ ನೀಡಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ ಭಾನುವಾರ ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪರ ೫ ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಗರ್ಭಿಣಿ ಮಹಿಳೆಯರಿಗೆ ಆರ್ಥಿಕ ಸಹಾಯ ಮಾಡಲಾಯಿತು.

ಜಿಲ್ಲಾ ಪಂಚಾಯ್ತಿ ಸದಸ್ಯ, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ಕ್ಷೇತ್ರದ ಸಮಸ್ತ ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸುವ ಮೂಲಕ ಕಳೆದ ಹತ್ತು ವರ್ಷಗಳಿಂದ ಜೆಡಿಎಸ್ ಪಕ್ಷದ ಏಳಿಗೆಗಾಗಿ ದುಡಿಯುತ್ತಿರುವ ಮೇಲೂರಿನ ರವಿಕುಮಾರ್‌ರ ಸಮಾಜಮುಖಿ ಕಾರ್ಯಗಳು ಕ್ಷೇತ್ರದಾದ್ಯಂತ ಮತ್ತಷ್ಟು ನಡೆಯಲಿ.
ಕಳೆದ ಎರಡು ಚುನಾವಣೆಗಳಲ್ಲಿ ಪಕ್ಷದ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದ ಮೇಲೂರಿನ ರವಿಕುಮಾರ್ ಹಾಗು ತಂಡ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಹೋಬಳಿಗೊಂದರಂತೆ ಆಂಬ್ಯುಲೆನ್ಸ್ ಉಚಿತವಾಗಿ ನೀಡುವುದಷ್ಟೇ ಅಲ್ಲದೆ ಅದರ ನಿರ್ವಹಣೆಯನ್ನು ಟ್ರಸ್ಟ್ ಮೂಲಕ ಮಾಡುತ್ತಿದ್ದಾರೆ. ಇಂತಹ ಸಾಮಾಜಿಕ ಕಳಕಳಿಯುಳ್ಳ ಮುಖಂಡರ ಸೇವೆ ಮುಂದಿನ ದಿನಗಳಲ್ಲಿ ತಾಲ್ಲೂಕಿಗೆ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಪಿಯುಸಿ ಹಾಗು ಪದವಿ ಓದುತ್ತಿರುವ ಸುಮಾರು ೨೫೦ ಮಂದಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಗರ್ಭಿಣಿ ಸ್ತ್ರೀಯರಿಗೆ ತಲಾ ೧೦ ಸಾವಿರದಂತೆ ಸುಮಾರು ೧೧೭ ಮಂದಿ ಮಹಿಳೆಯರಿಗೆ ಆರ್ಥಿಕ ಸಹಾಯ ಟ್ರಸ್ಟ್ ಮೂಲಕ ನೀಡಲಾಯಿತು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮೃತಪಟ್ಟ ತಾಲ್ಲೂಕಿನ ಯಣ್ಣಂಗೂರಿನ ಹುತಾತ್ಮ ಯೋಧ ಗಂಗಾಧರ್‌ರ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಸದಸ್ಯ ರಾಜಶೇಖರ್, ಆದಿಲ್‌ಪಾಷ, ಬಶೆಟ್ಟಹಳ್ಳಿ ವೆಂಕಟೇಶ್, ಗೊರಮಡುಗು ರಾಮಾಂಜಿನಪ್ಪ, ದೊಣ್ಣಹಳ್ಳಿ ರಾಮಣ್ಣ, ಮುಗಲಡಿಪಿ ನಂಜಪ್ಪ, ಕೆ.ಎಸ್.ಮಂಜುನಾಥ್, ತಾದೂರು ರಘು, ರಮೇಶ್, ಸಾದಲಿ ವೆಂಕಟಾಚಲಪತಿ, ಜೆ.ಎಂ.ವೆಂಕಟೇಶ್, ನಾಗಮಂಗಲ ಶ್ರೀನಿವಾಸಗೌಡ ಕಾರ್ಯಕ್ರಮದಲ್ಲಿ ಹಾಜರಿದ್ದರು.