ಎಚ್.ಡಿ.ಕುಮಾರಸ್ವಾಮಿ ಪುನಃ ರಾಜ್ಯದ ಮುಖ್ಯಮಂತ್ರಿಯಾಗಲಿ

0
1439

ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪುನಃ ರಾಜ್ಯ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡರೆ ಮಾತ್ರ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಬಯಲುಸೀಮೆಯ ತಾಲ್ಲೂಕುಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವೆಂದು ಜೆ.ಡಿ.ಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಪಿಂಡಿಪಾಪನಹಳ್ಳಿ ಬಳಿ ಶನಿವಾರ ಎಚ್.ಡಿ.ದೇವೇಗೌಡ ಹಾಗು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರವಾಸಕ್ಕೆ 76 ಬಸ್ಸುಗಳ ಮೂಲಕ ತೆರಳಿದ ಓಂ ಶಕ್ತಿ ದೇವರ ಭಕ್ತರಿಗೆ ಶುಭ ಹಾರೈಸಿ ಅವರು ಮಾತನಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕಿನಾದ್ಯಂತ ಮೇಲ್ಮರವತ್ತೂರು ದೇವಾಲಯದ ಆದಿಪರಾಶಕ್ತಿಯ ದರ್ಶನಕ್ಕೆ ಭಕ್ತರ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅಮ್ಮನವರ ಆಶೀರ್ವಾದ ಪಡೆಯಲು ಪ್ರವಾಸ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು ದೇವಿಯ ಕೃಪೆಯಿಂದ ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪುನಃ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್ ಮಾತನಾಡಿ, ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಮಂದಿ ಭಕ್ತರು ಓಂ ಶಕ್ತಿ ಅಮ್ಮನವರ ದೇವಸ್ಥಾನಕ್ಕೆ ಜೆಡಿಎಸ್ ಪಕ್ಷದ ವತಿಯಿಂದ ಕಳುಹಿಸಲಾಗುತ್ತಿದೆ. ಅಮ್ಮನವರು ನಮ್ಮ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿ. ಮಳೆ, ಬೆಳೆ, ಸುಖ, ಶಾಂತಿಯನ್ನು ನೀಡಿ ಆಶೀರ್ವದಿಸಲಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಂಕ್ ಮುನಿಯಪ್ಪ, ತನುಜಾ ರಘು, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಪಿ.ಶಿವಾರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ಮುಖಂಡರಾದ ಮುಗಿಲಡಿಪಿ ನಂಜಪ್ಪ, ಕೆ.ಎಸ್.ಮಂಜುನಾಥ್, ಆರ್.ಎ.ಉಮೇಶ್, ಕದಿರಿ ಯೂಸುಫ್, ಆದಿಲ್ಪಾಷ, ಸಮೀವುಲ್ಲಾ, ಸೈಯ್ಯದ್ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!