ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ಸೈನಿಕರ ವಿರುದ್ದ ಅವಹೇಳನಕಾರಿ ಹಾಗೂ ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವ ಕಿಡಿಗೇಡಿಗಳ ಮತ್ತು ಕಾರ್ಯಕ್ರಮ ಆಯೋಜನೆ ಮಾಡಿದ್ದ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆಯ ಪರ ಕಾಂಗ್ರೆಸ್ನ ದಿಗ್ವಿಜಯ್ಸಿಂಗ್ ಹಾಗು ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಅಲ್ಲಿನ ಕಾಶ್ಮೀರಿ ವಿದ್ಯಾರ್ಥಿಗಳು ಭಾರತೀಯ ಸೇನೆಯ ವಿರುದ್ಧ ಘೋಷಣೆಗಳನ್ನು ಕೂಗುವುರೊಂದಿಗೆ ದೇಶದ ಹಿತಾಸಕ್ತಿಗೆ ಧಕ್ಕೆ ತಂದಿದ್ದಾರೆ. ದೇಶದ ರಕ್ಷಣೆಗಾಗಿ ಹಗಲು ರಾತ್ರಿಯೆನ್ನದೇ ಗಡಿ ಕಾಯುವ ಸೈನಿಕರ ವಿರುದ್ಧ ಘೋಷಣೆ ಕೂಗಿರುವುದು ಖಂಡನೀಯ.
ಇಂತಹ ಸಂಸ್ಥೆಯ ಪರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ಸಿಂಗ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವುದು ದೇಶಕ್ಕೆ ಮಾಡಿರುವ ಅಪಮಾನವಾಗಿದೆ. ಇದನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸುವ ಮೂಲಕ ಈ ಇಬ್ಬರು ಕಾಂಗ್ರೆಸ್ ನಾಯಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಗ್ರೇಡ್ ೨ ತಹಸೀಲ್ದಾರ್ ವಾಸುದೇವಮೂರ್ತಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ಜಿಲ್ಲಾ ಕಾರ್ಯದರ್ಶಿ ಸುರೇಂದ್ರಗೌಡ, ಮುಖಂಡರಾದ ದೊಣ್ಣಹಳ್ಳಿ ರಾಮಣ್ಣ, ಸುರೇಶ್, ಮುನಿರಾಜು, ದಾಮೋದರ್, ಸುಜಾತಮ್ಮ ಮತ್ತಿತರರು ಪಾಲ್ಗೊಂಡಿದ್ದರು.
- Advertisement -
- Advertisement -
- Advertisement -
- Advertisement -