Home News ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

0

ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವಂತಹ ಮಾನಸಿಕ, ದೈಹಿಕ ದೌರ್ಜನ್ಯಗಳನ್ನು ತಡೆಗಟ್ಟಲು ಪ್ರತಿರೋಧಿಸುವಂತಹ ಮನಭಾವನೆ ಮತ್ತು ಧೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾದೀಶರಾದ ಮಂಜುನಾಥ್ ಹೇಳಿದರು.
ನಗರದ ಬಿಜಿಎಸ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಹೆಣ್ಣು ಮಗು ರಕ್ಷಣಾ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳ ರಕ್ಷಣೆಗಾಗಿ ಕಾನೂನುಗಳು ರೂಪುಗೊಳ್ಳುತ್ತಿವೆ, ಆದರೆ ಅವುಗಳ ಉಪಯೋಗ ಮಾತ್ರ ಸರಿಯಾಗಿ ಆಗುತ್ತಿಲ್ಲದ ಕಾರಣ ಸಮಾಜದಲ್ಲಿ ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆಗಳು, ದೌರ್ಜನ್ಯಗಳು ನಡೆಯುತ್ತಿವೆ. ಆದ್ದರಿಂದ ವಿದ್ಯಾವಂತ ಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕು. ಶೋಷಣೆಯನ್ನು ವಿರೋಧಿಸುವಂತಹ ಧೈರ್ಯವನ್ನು ತಂದುಕೊಳ್ಳಬೇಕು. ಆಗ ಮಾತ್ರವೇ ಸಮಾಜದಲ್ಲಿ ಬದಲಾವಣೆಯನ್ನು ಕಾಣಲು ಸಾಧ್ಯವಾಗುವುದರ ಜೊತೆಗೆ ನಿರ್ಭಿತಿಯ ಆರೋಗ್ಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ಸಿವಿಲ್ ನ್ಯಾಯಾಧೀಶರಾದ ಶ್ರೀಕಂಠ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆಯ ವಿಷಯದಲ್ಲಿ ಕಾನೂನಿನಲ್ಲಿ ಬಹಳಷ್ಟು ಬಿಗಿಯಾದ ವಾತಾವರಣವಿದೆ ಆದರೆ ಕಾನೂನು ಅರಿವು ಪಡೆದುಕೊಂಡು ಇದರ ಸದುಪಯೋಗ ಪಡೆದುಕೊಳ್ಳುವವರ ಸಂಖ್ಯೆ ಕಡಿಮೆಯಾಗಿರುವುದರಿಂದ ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳುತ್ತಿಲ್ಲ, ಹೆಣ್ಣು ಮಕ್ಕಳು ಸ್ವಯಂ ರಕ್ಷಣೆಗೆ ಮುಂದಾಗಬೇಕು ಎಂದರು.
ಸರ್ಕಾರಿ ಅಭಿಯೋಜಕಿ ಕುಮುದಿನಿ ಮಾತನಾಡಿ, ಸಮಾಜದ ಎಲ್ಲಾ ರಂಗಗಳಲ್ಲಿ ಮಹಿಳೆಯರು ಭಾಗವಹಿಸುತ್ತಿದ್ದಾರೆ. ಮಹಿಳೆಯರು ಭಾಗವಹಿಸುತ್ತಿರುವ ಎಲ್ಲಾ ರಂಗಗಳಲ್ಲೂ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇವುಗಳನ್ನು ತಡೆಯಬೇಕಾದರೆ ಹೆಣ್ಣು ಮಕ್ಕಳು ಮಾನಸಿಕವಾಗಿ ಸಿದ್ಧರಾಗಬೇಕು. ಸಮಾಜದಲ್ಲಿ ತಮಗಾಗುವಂತಹ ಸಮಸ್ಯೆಗಳ ಕುರಿತು, ತಾವು ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳು ಕುರಿತು ತಂದೆ, ತಾಯಿ, ಪೊಷಕರ ಬಳಿಯಲ್ಲಿ ಮುಕ್ತವಾಗಿ ಹಂಚಿಕೊಳ್ಳಬೇಕು. ಶಾಲಾ ಶಿಕ್ಷಕರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರ್ ಗೌಡ ಮಾತನಾಡಿ, ಹೆಣ್ಣು ಮಕ್ಕಳನ್ನು ಗೌರವಿಸುವಂತಹ ಪ್ರವೃತ್ತಿಯನ್ನು ಯಾರು ಬೆಳೆಸಿಕೊಳ್ಳುತ್ತಾರೊ ಅಂತಹ ಸಮಾಜ ಆರೋಗ್ಯವಂತವಾಗಿರುತ್ತದೆ. ಪ್ರೌಢಾವಸ್ಥೆಯಲ್ಲಿ ಬಹಳಷ್ಟು ಜಾಗರೂಕತೆಯಿಂದ ಕಾಪಾಡಿಕೊಂಡು, ಜೀವನದಲ್ಲಿ ನಿರ್ದಿಷ್ಟವಾದ ಗುರಿ ಹೊಂದಿಕೊಂಡು ಸಾಧನೆಯ ಕಡೆಗೆ ಗಮನಹರಿಸಬೇಕು ಎಂದರು.
ಕಾರ್ಯದರ್ಶಿ ಎಂ.ಬಿ.ಲೊಕೇಶ್, ಪ್ರಾಂಶುಪಾಲ ಮಹದೇವ್, ವಕೀಲ ಮಂಜುನಾಥ್, ಹಾಜರಿದ್ದರು.