ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲ್ಲೂಕು ವಕೀಲರ ಸಂಘದಿಂದ ಶನಿವಾರ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ಮಾತನಾಡಿದರು.
ವಿಶ್ವವ್ಯಾಪಿ ಹಬ್ಬುತ್ತಿರುವ ಕರೋನ ವೈರಸ್ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ರೋಗ ತಡೆಗಟ್ಟಲು ಏನೆಲ್ಲ ಮುಂಜಾಗೃತೆಯನ್ನು ವಹಿಸಬೇಕೆಂದು ತಿಳಿಸಲು ನಗರ ಹಾಗೂ ತಾಲ್ಲೂಕಿನಾದ್ಯಂತ ವ್ಯಾಪಕ ಪ್ರಚಾರ ಕಾರ್ಯವನ್ನು ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.
ಜನರಲ್ಲಿ ವೈರಸ್ ಬಗ್ಗೆ ಹೆಚ್ಚು ಹೆಚ್ಚು ಅರಿವು ಮೂಡಿಸುವುದೊಂದೇ ಸದ್ಯಕ್ಕೆ ಇರುವ ಪರಿಣಾಮಕಾರಿ ಮಾರ್ಗ. ಹಳ್ಳಿಗಳಲ್ಲಿ ತಮಟೆ ಹೊಡೆಸುತ್ತಾ ಸಾಮಾಂಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಸ್ವಚ್ಛತೆಯ ಬಗ್ಗೆ ಗಮನ ಕೊಡುವುದು, ಅನಗತ್ಯವಾಗಿ ಹೊರಗೆ ಹೋಗದೆ ಇರುವುದರ ಬಗ್ಗೆ ತಿಳಿಹೇಳಲಾಗುತ್ತಿದೆ. ನಗರದಲ್ಲಿ ಆಟೋ ಮೂಲಕ ಧ್ವನಿವರ್ಧಕದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ಕರಪತ್ರಗಳನ್ನು ಹಂಚಲಾಗುತ್ತದೆ ಎಂದರು.
ತಾಲ್ಲುಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಯಾವುದೇ ಶಂಕಿತ ಪ್ರಕರಣಗಳು ಇಲ್ಲ. ಆದರೂ ಲಾಕ್ ಡೌನ್ ಗೆ ಸಾರ್ವಜನಿಕರು ಸಹಕರಿಸಬೇಕು. ಕೊರೊನಾ ವೈರಸ್ ಲಕ್ಷಣಗಳಾದ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತಾ ದೃಷ್ಟಿಯಿಂದ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರವನ್ನು ಅಡ್ಡ ಹಿಡಿಯಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು. ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ರೋಗದ ಲಕ್ಷಣ ಹೊಂದಿರುವವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಸಂಜುಕುಮಾರ್ ಎ.ಪಚ್ಚಾಪುರೆ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಗೌಡ, ಕಾರ್ಯದರ್ಶಿ ಲೋಕೇಶ್, ವಕೀಲರಾದ ಸುಬ್ರಮಣಿ, ಭಾಸ್ಕರ್, ವೀಣಾ, ಮಂಜುನಾಥ್, ರಾಮಕೃಷ್ಣ, ಜಿಲ್ಲಾ ಮಕ್ಕಳ ತಜ್ಞ ಡಾ.ಚನ್ನಕೇಶವರೆಡ್ಡಿ, ಆರೋಗ್ಯ ಇಲಾಖೆಯ ಲೋಕೇಶ್, ವಿಜಯ, ಮುನಿರತ್ನಮ್ಮ, ಗೀತಾ, ನರಸಿಂಹಮೂರ್ತಿ, ಜೀವಿಕಾ, ಕವಿತಾ ಹಾಜರಿದ್ದರು.
- Advertisement -
- Advertisement -
- Advertisement -







