ಸರ್ಕಾರದ ಸೌಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟದ ಬೆಳೆಗಳನ್ನು ರೈತರು ಬೆಳೆಯಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಲ್ಲಿ ಗುರುವಾರ ೩೮ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಹೋಬಳಿ ಮಟ್ಟದ ೨೦೧೬ ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ರೈತರು ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ನೂತನ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆಯುವುದರ ಕಡೆಗೆ ಗಮನಹರಿಸಬೇಕು, ಪ್ರತಿ ಮೂರು ವರ್ಷಕ್ಕೊಮ್ಮೆ ಮಣ್ಣು ಹಾಗೂ ನೀರಿನ ಪರೀಕ್ಷೆ ಮಾಡಿಸಬೇಕು. ಕೃಷಿ ಇಲಾಖೆಯ ಅಧಿಕಾರಿಗಳು ನೇರವಾಗಿ ರೈತರ ಭೂಮಿಗೆ ಬೇಟಿ ನೀಡಿ ರೈತರಿಗೆ ಅಗತ್ಯವಾಗಿರುವ ಮಾಹಿತಿಗಳನ್ನು ತಲುಪಿಸುವಂತಹ ಪ್ರಾಮಾಣಿಕ ಸೇವೆ ಮಾಡಬೇಕು. ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇರುವಂತಹ ದ್ವಿದಳ ಧಾನ್ಯಗಳು, ಎಣ್ಣೆ ಕಾಳುಗಳನ್ನು ಬೆಳೆಯುವುದು ರೂಢಿಸಿಕೊಳ್ಳುವುದರಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ನೀಡಿ ಕಾಲ ಕಾಲಕ್ಕೆ ಮಾಹಿತಿಯನ್ನು ಪಡೆಯಬೇಕು. ಇಲಾಖಾಧಿಕಾರಿಗಳು, ಅರ್ಹ ಫಲಾನುಭವಿಗಳಿಗೆ ಸೌಲತ್ತುಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಕೃಷಿ, ತೋಟಗಾರಿಕೆ, ಪಶುಸಂಗೋಪನಾ ಇಲಾಖೆ ಹಾಗೂ ರೇಷ್ಮೆ ಇಲಾಖೆಗಳಿಂದ ರೈತರಿಗೆ ಸಿಗಬೇಕಾಗಿರುವ ಅಗತ್ಯವಾದ ಮಾಹಿತಿಗಳು ಲಭ್ಯವಾಗುತ್ತಿಲ್ಲ, ಹೊಸ ಹೊಸ ಮಾದರಿಯ ತಂತ್ರಜ್ಞಾನದ ಬಗ್ಗೆ ಅರಿವು ಮೂಡುತ್ತಿಲ್ಲ. ಈ ಭಾಗದ ಜನರು ಹೈನುಗಾರಿಕೆ ಹಾಗೂ ರೇಷ್ಮೆಯಿಂದಲೇ ಜೀವನ ಮಾಡುತ್ತಿದ್ದು, ಈ ಎರಡೂ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳು ಲಭ್ಯವಾಗುತ್ತಿಲ್ಲ. ಕೃಷಿ ಹೊಂಡಗಳ ನಿರ್ಮಾಣದಲ್ಲಿ ಅಕ್ರಮಗಳಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಜಾಗ್ರತೆಯಿಂದ ಕೆಲಸ ನಿರ್ವಹಿಸಬೇಕು. ರೈತರು ಕಚೇರಿಗಳಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸುವುದರ ಜೊತೆಗೆ ಅವರಿಗೆ ಸೂಕ್ತವಾದ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ಚೀಮಂಗಲ ಕ್ಷೇತ್ರದ ಸದಸ್ಯೆ ತನುಜಾ ರಘು ಮಾತನಾಡಿ, ಪ್ರತಿಯೊಬ್ಬ ರೈತರು ದ್ರಾಕ್ಷಿ ಮತ್ತು ಮಾವಿನ ಬೆಳೆಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸುವುದರಿಂದ ಪ್ರಕೃತಿ ವಿಕೋಪದಂತಹ ಸನ್ನಿವೇಶಗಳಲ್ಲಿ ಕನಿಷ್ಟ ಬೆಳೆಗಳಿಗೆ ಹೂಡಿಕೆ ಮಾಡಿರುವ ಬಂಡವಾಳವನ್ನಾದರೂ ವಿಮೆಯಿಂದ ಪಡೆಯಲು ಸಹಕಾರಿಯಾಗಲಿದೆ ಎಂದರು.
ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ತೋಟಗಾರಿಕೆ, ಇಲಾಖೆಗಳಿಂದ ಸ್ತಬ್ಧ ಚಿತ್ರಗಳ ಮೂಲಕ ರೈತರಿಗೆ ಮಾಹಿತಿಗಳನ್ನು ನೀಡಲಾಯಿತು. ಚಿಂತಾಮಣಿಯ ವಿಜ್ಞಾನಿ ಡಾ.ಆನಂದ ಅವರಿಂದ ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿತ್ತು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ನಿರ್ಮಲಮುನಿರಾಜು, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಸದಸ್ಯರಾದ ಚಂದ್ರಕಲಾ, ಶೋಭಾಶಶಿಕುಮಾರ್, ಮುನಿಯಪ್ಪ, ಗ್ರಾಮಪಂಚಾಯತಿ ಅಧ್ಯಕ್ಷೆ ಉಮಾಶಿವಕುಮಾರ್, ತೋಟಗಾರಿಕಾ ಸಹಾಯಕ ನಿರ್ದೇಶಕ ಎ.ಎಚ್.ಆನಂದ್, ಕೃಷಿ ಇಲಾಖೆಯ ದೇವೆಗೌಡ, ರೇಷ್ಮೆ ಇಲಾಖೆಯ ಚಂದ್ರಪ್ಪ, ಗೋಪಾಲರಾವ್. ರವಿಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -