ಮಾಜಿ ಶಾಸಕ ಎಂ.ರಾಜಣ್ಣ ತಮ್ಮ ಅವಧಿಯಲ್ಲಿಯೇ ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಆರಂಭವಾಗಬೇಕು ಎಂದು ಚುನಾವಣೆಗೂ ಮುನ್ನ ಕಳೆದ ಮಾರ್ಚ್ ೨೧ ರಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಹಿತ್ತಲಹಳ್ಳಿ ಗೇಟ್ ಬಳಿ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಶಾಸಕರಾಗಿರುವ ವಿ.ಮುನಿಯಪ್ಪ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಅದೇ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಡಿಪೋಗೆ ಎರಡನೇ ಬಾರಿ ಗುದ್ದಲಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿ.ಮುನಿಯಪ್ಪ, ನಗರದ ಹೊರವಲಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಘಟಕ ನಿರ್ಮಾಣವಾಗುವುದರಿಂದ ನಗರ ಉನ್ನತೀಕರಣಗೊಳ್ಳುವುದು. ಕ್ಷೇತ್ರದ ಗ್ರಾಮೀಣ ಪ್ರದೇಶದ ಜನತೆ ಹಾಗೂ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ. ಸುಮಾರು ೫ ಎಕರೆ ೧೫ ಗುಂಟೆ ಜಮೀನಿನಲ್ಲಿ ೫ ಕೋಟಿ ೬೮ ಲಕ್ಷ ರೂಗಳ ವೆಚ್ಚದಲ್ಲಿ ಬಸ್ ಘಟಕದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ್ದು ಮುಂಬರುವ ಒಂಬತ್ತು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ನೂತನ ಬಸ್ ಘಟಕ ನಿರ್ಮಾಣವಾಗುವುದರಿಂದ ತಾಲ್ಲೂಕಿನ ಸುಮಾರು ೧೬೨ ಗ್ರಾಮಗಳಿಗೆ ಸಾರಿಗೆ ಸೌಲಭ್ಯ ಸಿಗಲಿದೆ. ಪ್ರತಿನಿತ್ಯ ಸುಮಾರು ೭,೦೦೦ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ ಕಾಲೇಜು ಗಳಿಗೆ ಹೋಗಲು ಸಹಕಾರಿಯಾಗಲಿದೆ ಎಂದರು.
ಈ ಭಾಗದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬದ್ದ ವೈರಿಗಳಾಗಿದ್ದರೂ ಇದೀಗ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರದ ಮಹತ್ತರವಾದ ಯೋಜನೆಗಳು ಜಾರಿಯಾಗಬೇಕಾದರೆ ಎಲ್ಲರೂ ಸಹಕರಿಸಬೇಕು. ಮುಂದಿನ ಎರಡು ವರ್ಷಗಳೊಳಗೆ ತಾಲ್ಲೂಕಿನಾದ್ಯಂತ ಕೆರೆಗಳಲ್ಲಿ ಬೆಳೆದು ನಿಂತಿರುವ ಜಾಲಿ ಗಿಡಗಳನ್ನು ತೆರವು ಗೊಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗಬೇಕು ಎಂದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಕಾರ್ಯಪಾಲಕ ಗುರುಪ್ರಸಾದ್, ತಾಲ್ಲೂಕು ಪಂಚಾಯಿತಿ ಸದಸ್ಯ ನರಸಿಂಹಯ್ಯ, ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್, ಪಿಡಿಓ ಅರುಣಕುಮಾರಿ, ಬೆಳ್ಳೂಟಿ ಸಂತೋಷ್, ಚಂದ್ರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಎಸ್.ಎಂ.ನಾರಾಯಣಸ್ವಾಮಿ ಹಾಜರಿದ್ದರು.
- Advertisement -
- Advertisement -
- Advertisement -