ಹಾಲು ಉತ್ಪಾದಕರ ಸಹಕಾರ ಸಂಘಗಳು, ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವ ಮೂಲಕ ಆರ್ಥಿಕವಾಗಿ ಬೆಳವಣಿಗೆಯನ್ನು ಕಾಣಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಮರಿಹಳ್ಳಿ ಗ್ರಾಮದಲ್ಲಿ ಭಾನುವಾರ ನೂತನ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿನ ೧೯೨ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು ತಾಲ್ಲೂಕಿನಿಂದ ಪ್ರತಿನಿತ್ಯ ೧.೨೦ ಲಕ್ಷ ಲೀಟರ್ ಹಾಲನ್ನು ಉತ್ಪಾದನೆ ಮಾಡುವ ಮೂಲಕ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಲ್ಲೂಕು ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ನೂತನ ಸಂಘಗಳ ಸ್ಥಾಪನೆಯ ಮೂಲಕ ಮೊದಲ ಸ್ಥಾನಕ್ಕೇರಬೇಕು ಎಂದರು.
ದತ್ತಿಯ ಮೂಲಕ ಉತ್ಪಾದಕರು ಹಾಗೂ ಅವರ ಮಕ್ಕಳ ಕ್ಷೇಮಾಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ, ಸಿಗುವಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ರಾಜಕೀಯ ರಹಿತವಾಗಿ ಸಹಕಾರ ಸಂಘಗಳನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ ಮಾತನಾಡಿ, ರೈತರು ಹೈನೋದ್ಯಮದಲ್ಲಿ ತೊಡಗಿಸಿಕೊಂಡು, ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು, ಡಿ.ಸಿ.ಸಿ.ಬ್ಯಾಂಕ್ ಹಾಗೂ ಎಸ್.ಎಫ್.ಸಿ.ಎಸ್.ಬ್ಯಾಂಕುಗಳು ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಲಭ್ಯವಾಗುವಂತಹ ಸಾಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಹಾಲಿನ ಉತ್ಪಾದನೆಯಲ್ಲಿ ತೊಡಗಿಸಿಕೊಂಡು ತಮ್ಮ ಕುಟುಂಬವನ್ನು ಆರ್ಥಿಕವಾಗಿ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುವುದರ ಜೊತೆಗೆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಮಾಜಿ ಅಧ್ಯಕ್ಷ ಯರ್ರಬಚ್ಚಪ್ಪ, ಮುರಳಿ, ಶ್ರೀನಿವಾಸ್, ಗೋವಿಂದಪ್ಪ, ಮುನಿಯಪ್ಪ, ಸೋಮು, ಶಿಡ್ಲಘಟ್ಟ ಉಪಕಚೇರಿ ಉಪವ್ಯವಸ್ಥಾಪಕ ಹನುಮಂತರಾವ್, ನಾರಾಯಣಸ್ವಾಮಿ, ಮುನಿರೆಡ್ಡಿ, ಅಂಬರೀಷ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -