ಗ್ರಾಮಸಭೆಗಳ ಮಹತ್ವವನ್ನು ಅರಿತುಕೊಳ್ಳಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಬೇಕು ಎಂದು ಎಇಇ ಗಣಪತಿ ಸಾಕರೆ ಹೇಳಿದರು.
ತಾಲ್ಲೂಕಿನ ಮೇಲೂರಿನ ಗ್ರಾಮದ ಸಮುದಾಯಭವನದಲ್ಲಿ ದಿ.ರಾಜೀವ್ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಗುರುವಾರ ಆಯೋಜನೆ ಮಾಡಲಾಗಿದ್ದ ವಿಶೇಷ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿನ ಜನರು ಸರ್ಕಾರದಿಂದ ಬಿಡುಗಡೆಯಾಗುವಂತಹ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಯತ್ತ ಗಮನಹರಿಸಬೇಕು. ನರೇಗಾ ಯೋಜನೆಯೂ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ರಾಮಸಭೆಗಳನ್ನು ನಡೆಸಿ, ಕ್ರಿಯಾಯೋಜನೆಗಳನ್ನು ತಯಾರಿಸುವ ಮೂಲಕ ಅನುಮೋದನೆ ಪಡೆದು ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಸ್ಥಳೀಯ ಜನಪ್ರತಿನಿಧಿಗಳು ಆಯಾ ಹಳ್ಳಿಗಳಲ್ಲಿನ ರೈತರು ಹಾಗೂ ನಾಗರಿಕರಲ್ಲಿ ಧೈರ್ಯ ತುಂಬಿಸಬೇಕು ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಜಮುನಾಧರ್ಮೇಂದ್ರ ಮಾತನಾಡಿ, ಗ್ರಾಮಸಭೆಗಳಿಗೆ ಹಾಜರಾಗುವ ಮೂಲಕ ಜನರು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಅಭಿವೃದ್ಧಿಯ ವಿಚಾರದಲ್ಲಿ ಸಹಕಾರ ನೀಡಬೇಕು. ತಮ್ಮ ಮನೆಗಳ ಸಮೀಪದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡು ಮುಂದಿನ ದಿನಗಳಲ್ಲಿ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಹಕಾರ ನೀಡಬೇಕು ಎಂದರು.
ಕಂಬದಹಳ್ಳಿ ಗ್ರಾಮದಿಂದ ಆಗಮಿಸಿದ್ದ ಮಹಿಳೆಯರು, ಗ್ರಾಮದಲ್ಲಿ ಅಕ್ರಮವಾಗಿ ಮಧ್ಯಮಾರಾಟ ನಡೆಯುತ್ತಿದೆ, ೧೧ ವರ್ಷದ ಮಕ್ಕಳೂ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ. ರೈತರು ಸತ್ತರೆ, ಆತ್ಮಹತ್ಯೆ ಎನ್ನುತ್ತೀರಿ, ಮಕ್ಕಳು ಕುಡಿತಕ್ಕೆ ಬಲಿಯಾಗುತ್ತಿದ್ದಾರೆ. ಜಿಲ್ಲೆಯ ಎಸ್.ಪಿ. ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದೇವೆ. ಯಾರೋಬ್ಬರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪೊಲೀಸರಿಗೆ ದೂರು ನೀಡಿದರೆ, ಅಕ್ರಮವಾಗಿ ಮಧ್ಯಮಾರಾಟ ಮಾಡುವಂತಹ ಅಂಗಡಿಗಳ ಮಾಲೀಕರಿಂದ ಹಣವನ್ನು ಪಡೆದುಕೊಂಡು ಸುಮ್ಮನಿದ್ದಾರೆ. ನೀವಾದರೂ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇಲೂರು, ಗಂಗನಹಳ್ಳಿ, ಚೌಡಸಂದ್ರ, ಕಂಬದಹಳ್ಳಿ ಗ್ರಾಮಗಳ ಜನರು ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಸಲ್ಲಿಸಿದರು.
ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುವಂತಹ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷ ಆಂಜನೇಯರೆಡ್ಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜುನಾಥ್, ಆರ್.ಎ.ಉಮೇಶ್ ಸೇರಿದಂತೆ ಎಲ್ಲಾ ಸದಸ್ಯರುಗಳು ಸಭೆಯಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -