ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮತ್ತು ಮೂಲಭೂತ ಸವಲತ್ತುಗಳನ್ನು ಒದಗಿಸಲು ಹೆಚ್ಚಿನ ಆಧ್ಯತೆ ನೀಡಲಾಗಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿತ್ತಲಹಳ್ಳಿ ಗ್ರಾಮದಲ್ಲಿ ೫ ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಮೂರೂವರೆ ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಸೇರಿದಂತೆ ಮೂಲಭೂತ ಸವಲತ್ತು ಕಲ್ಪಿಸಲು ಹೆಚ್ಚಿನ ಆಧ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರದ ಉದ್ದಗಲಕ್ಕೂ ಓಡಾಡಿ ಅಗತ್ಯಕ್ಕನುಸಾರವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುವುದು ಎಂದರು.
ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸ್ಥಳೀಯ ಮುಖಂಡರೂ ಸೇರಿದಂತೆ ನಾಗರಿಕರು ಗಮನ ಹರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ ಬಯಲುಸೀಮೆ ಭಾಗದ ಬಹುತೇಕ ಜನರು ಜೀವನೋಪಾಯಕ್ಕಾಗಿ ನಂಬಿಕೊಂಡಿರುವ ಹೈನುಗಾರಿಕೆಯನ್ನು ಮತ್ತಷ್ಟು ಬಲಪಡಿಸಿ ಉತ್ತಮ ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವ ಜೊತೆಗೆ ಪ್ರತಿಯೊಬ್ಬರೂ ಆರ್ಥಿಕವಾಗಿ ಮತ್ತಷ್ಟು ಅಭಿವೃದ್ದಿ ಹೊಂದಬೇಕು ಎಂದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜುಂಡಪ್ಪ, ಮುಖಂಡರಾದ ಎಚ್.ಜಿ.ಗೋಪಾಲಗೌಡ, ಗೋಪಾಲಪ್ಪ, ಮಳ್ಳೂರಯ್ಯ, ಪಿಡಿಓ ಅರಣಕುಮಾರಿ, ಗುತ್ತಿಗೆದಾರ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.