ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಆದ್ಯತೆ ನೀಡಿ

0
395

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಜನಪ್ರತಿನಿಧಿಗಳಷ್ಟೇ ಅಲ್ಲದೇ ಅಧಿಕಾರಿಗಳು ಹೆಚ್ಚು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ತಾಲ್ಲೂಕು ಪಂಚಾಯ್ತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನತೆಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ಅಧಿಕಾರಿಗಳು ಮೊದಲು ಮಾಡಬೇಕು. ಕೆಲವೇ ಕೆಲ ಪ್ರಭಾವಿಗಳು ಹಾಗು ಮಧ್ಯವರ್ತಿಗಳ ಮುಖಾಂತರ ಸರ್ಕಾರದ ವಿವಿಧ ಯೋಜನೆಗಳು ಅನರ್ಹರಿಗೆ ಸಿಗುತ್ತಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು.
ತಾಲ್ಲೂಕಿನಾಧ್ಯಂತ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳನ್ನು ಆಯಾ ಗ್ರಾಮಗಳಲ್ಲಿರುವ ಶಾಲೆಗಳ ಹೆಚ್ಚುವರಿ ಕೊಠಡಿಗಳಿಗೆ ವರ್ಗಾಯಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಹಕರಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ ತಾಲ್ಲೂಕಿನ ವಿವಿದೆಡೆ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಭವನಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು ಎಂದರು.
ರೇಷ್ಮೆ ಇಲಾಖೆ ಸೇರಿದಂತೆ ಕೃಷಿ ಇಲಾಖೆಯಲ್ಲಿ ಈಚೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು ರೈತರಿಗೆ ಆಧ್ಯತೆಯ ಮೇಲೆ ಸವಲತ್ತುಗಳನ್ನು ಒದಗಿಸಿ ವಿನಾಕಾರಣ ರೈತರನ್ನು ಕಚೇರಿಗೆ ಅಲೆಸುವುದನ್ನು ಮೊದಲು ಬಿಡಬೇಕು ಎಂದರು.
ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ನರೇಗಾ, ಬೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳಿಂದ ಸಿಗುವ ವಿವಿಧ ಸವಲತ್ತುಗಳು ಹಾಗು ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಮಾಹಿತಿಯನ್ನು ಸಭೆಗೆ ಸಲ್ಲಿಸಿದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಇಓ ವೆಂಕಟೇಶ್, ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
 

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!