ನೀರಿನ ಪೂರೈಕೆಯ ಬಗ್ಗೆ ಗಮನವಿರಲಿ. ಯಾವುದೇ ಕಾರಣಕ್ಕೂ ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಧ್ಯತೆ ಮೇರೆಗೆ ಕುಡಿಯುವ ನೀರು ಸರಬರಾಜು ಮಾಡಲು ಮುಂದಾಗುವ ಜೊತೆಗೆ ಕುಡಿಯುವ ನೀರಿನ ಅಗತ್ಯ ಎಲ್ಲಿದೆಯೋ ಅಂತಹ ಕಡೆಗೆ ಖಾಸಗಿ ಕೊಳವೆಬಾವಿಗಳ ರೈತರ ಮನವೊಲಿಸಿ ನೀರು ಪಡೆದು ಪೂರೈಸಬೇಕು. ಎಲ್ಲಿ ಖಾಸಗಿ ಕೊಳವೆ ಬಾವಿಗಳಿಲ್ಲವೋ ಅಂತಹ ಕಡೆ ಮಾತ್ರ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.
ಇನ್ನು ಕಳೆದ ಮೂರ್ನಾಲ್ಕು ಸಭೆಗಳಿಂದ ಸಭೆಗೆ ಬಾರದೇ ಗೈರು ಹಾಜರಾಗುತ್ತಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಸಿಇಓ ರಿಗೆ ಪತ್ರ ಬರೆಯುವಂತೆ ಇಓ ವೆಂಕಟೇಶ್ ಅವರಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗಾಗಿ ಸ್ಥಳೀಯ ಜನಪ್ರತಿನಿಧಿಗಳಷ್ಟೇ ಅಲ್ಲದೇ ಅಧಿಕಾರಿಗಳು ಹೆಚ್ಚು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ತಾಲ್ಲೂಕು ಪಂಚಾಯ್ತಿಗೆ ಬರುವಂತಹ ಎಲ್ಲಾ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಎಲ್ಲರೂ ಶ್ರಮಿಸಬೇಕು ಎಂದರು.
ತಾಲ್ಲೂಕಿನಾಧ್ಯಂತ ನಡೆಯುತ್ತಿರುವ ಯಾವುದೇ ಕಾಮಗಾರಿಗಳ ಮಾಹಿತಿಯನ್ನು ತಾಲ್ಲೂಕು ಪಂಚಾಯ್ತಿ ಸದಸ್ಯರ ಗಮನಕ್ಕೆ ತಂದೇ ಮಾಡಬೇಕು. ಕಾಮಗಾರಿಯ ಗುಣಮಟ್ಟ ಹೇಗಿದೆ, ಯಾರು ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಸಿಗುತ್ತಿಲ್ಲ, ಈ ವಿಚಾರಗಳಲ್ಲಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು.
ಈ ಬಗ್ಗೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ ಮಾತನಾಡಿ ತಾಲ್ಲೂಕು ಪಂಚಾಯ್ತಿ ಸದಸ್ಯರ ಗಮನಕ್ಕೆ ತಂದು ಕೆಲಸ ಮಾಡಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. ಹಾಗಾಗಿ ಮುಂದಿನ ದಿನಗಳಲ್ಲಿ ಆಯಾ ಕ್ಷೇತ್ರದ ತಾಲ್ಲೂಕು ಪಂಚಾಯ್ತಿ ಸದಸ್ಯರ ಗಮನಕ್ಕೆ ತಂದು ಕಾಮಗಾರಿಗಳನ್ನು ಮಾಡುವಂತೆ ಹಾಜರಿದ್ದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬಾಗವಹಿಸಿದ್ದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮುಂದಿನ ಯೋಜನೆಗಳು ಸೇರಿದಂತೆ ಈಗಾಗಲೇ ನಡೆದಿರುವ ಕಾಮಗಾರಿಗಳ ವಿವರಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಇಓ ವೆಂಕಟೇಶ್, ವ್ಯವಸ್ಥಾಪಕ ಪ್ರಸಾದ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಎಲ್ಲಾ ಸದಸ್ಯರು ಹಾಜರಿದ್ದರು
- Advertisement -
- Advertisement -
- Advertisement -
- Advertisement -