Home News ಗ್ರಾಮೀಣ ಮಕ್ಕಳಲ್ಲಿ ಓದುವ ಅಭಿರುಚಿ ಹತ್ತಿಸಿ

ಗ್ರಾಮೀಣ ಮಕ್ಕಳಲ್ಲಿ ಓದುವ ಅಭಿರುಚಿ ಹತ್ತಿಸಿ

0

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಓದುವ ಸ್ಪರ್ಧೆಗಳನ್ನು ಏರ್ಪಡಿಸುತ್ತಾ ಸಾಹಿತ್ಯದ ಅಭಿರುಚಿಯನ್ನು ಬೆಳೆಸುತ್ತಾ ತಾಲ್ಲೂಕು ಕಸಾಪ ಉತ್ತಮ ಕಾರ್ಯವನ್ನು ಮಾಡುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ಶ್ಲಾಘಿಸಿದರು.
ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಜಾನಪದ ಗೀತೆ ಗಾಯನ ಸ್ಪರ್ಧೆ ಕಸಾಪ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪುಸ್ತಕಗಳು ಓಡಾಡುವ ಗುಡಿಗಳಂತೆ. ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆದಂತೆ ಅದು ಜೀವನದಲ್ಲಿ ಬಹಳಷ್ಟು ಪರಿಣಾಮಗಳನ್ನು ಉಂಟುಮಾಡುತ್ತದೆ. ಸ್ವಚ್ಛತೆ, ಹಸಿರು ಬೆಳೆಸುವ ಬಗ್ಗೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು ಮಾತನಾಡಿ, ಗ್ರಾಮೀಣ ಕಲೆಗಳು, ಆಟಗಳು, ಜಾನಪದ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲ್ಲೂಕು ಕಸಾಪ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿದೆ. ಮಕ್ಕಳನ್ನು ತಿದ್ದುತ್ತಾ, ಅವರಿಗೆ ಭಾಷೆ, ಸಂಸ್ಕೃತಿಯ ಬಗ್ಗೆ ತಿಳಿಸುವುದು ಬಹಳ ಮುಖ್ಯ. ಈ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಇತರರೂ ಸಹಕರಿಸಬೇಕು. ಸ್ವಾಮಿ ವಿವೇಕಾನಂದರು ಯುವಶಕ್ತಿಯ ಬಗ್ಗೆ ಬಹು ಆಶಯವನ್ನಿಟ್ಟಿದ್ದರು. ಅವರ ಆಶಯಗಳನ್ನು ನೆರವೇರಿಸಬೇಕಿದೆ ಎಂದರು.
ಜಾನಪದ ಗಾಯಕ ದೇವರಮಳ್ಳೂರು ಮಹೇಶ್‌ ಜಾನಪದ ಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಜಾನಪದ ಗಾಯಕ ದೇವರಮಳ್ಳೂರು ಮಹೇಶ್‌ ಅವರನ್ನು ಸನ್ಮಾನಿಸಲಾಯಿತು.
ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಸಾಪ ವತಿಯಿಂದ ನಡೆಸಿದ್ದ ಕರ್ನಾಟಕ ಏಕೀಕರಣ ವಿಷಯವಾಗಿ ಪ್ರಬಂಧ ಸ್ಪರ್ಧೆ ಮತ್ತು ಜಾನಪದ ಗೀತೆಗಳ ಗಾಯನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರಬಂಧ ಸ್ಪರ್ಧೆ ವಿಜೇತರಾದ ಕೆ ಎನ್ ಭವಾನಿ(ಪ್ರಥಮ ), ಸಿ ಎನ್ ನವೀನ್(ದ್ವಿತೀಯ), ಎಂ ಎಸ್ ನಿತೀಶ್ ಕುಮಾರ್(ತೃತೀಯ), ಜಾನಪದ ಗೀತೆಗಳ ಗಾಯನ ಸ್ಪರ್ಧೆ ವಿಜೇತರಾದ ಆರ್ ಚೈತ್ರ(ಪ್ರಥಮ), ಭವಾನಿ ಕೆ ಎನ್ (ದ್ವಿತೀಯ ), ಶ್ರಾವಣಿ ಟಿ ಎಲ್(ತೃತೀಯ) ಅವರಿಗೆ ತಾಲ್ಲೂಕು ಕಸಾಪ ವತಿಯಿಂದ ಪುಸ್ತಕ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ, ಪ್ರಧಾನ ಕಾರ್ಯದರ್ಶಿ ಎ.ಎಂ.ತ್ಯಾಗರಾಜ್‌, ಹೋಬಳಿ ಪದಾಧಿಕಾರಿ ಕೆಂಪಣ್ಣ, ಮಾಜಿ ಜಿಲ್ಲಾ ಅಧ್ಯಕ್ಷ ಎಸ್‌.ವಿ.ನಾಗರಾಜರಾವ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಮ್ಮ, ಉಪಾಧ್ಯಕ್ಷ ಸುರೇಂದ್ರಪ್ಪ, ಸದಸ್ಯೆ ಗುಣಮ್ಮ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪ್ರಭಾಕರ್‌, ಮುಖ್ಯಶಿಕ್ಷಕಿ ಹೇಮಾವತಿ, ಶಿಕ್ಷಕರಾದ ಮಾಲತಿ, ಗಣೇಶ, ಅನಿತಾ, ಶ್ರೀಧರ್‌, ವಿಜಯಶ್ರೀ, ರವಿ ಮತ್ತಿತರರು ಹಾಜರಿದ್ದರು.