Home News ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು

ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು

0

ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರದಿಂದ ನೀಡಲಾಗುವ ಸೈಕಲ್‌ಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳು ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಜಯಂತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ೨೦೧೬- ೧೭ ನೇ ಸಾಲಿನ ಸರ್ಕಾರದ ಉಚಿತ ಸೈಕಲ್ ವಿತರಣೆ ಹಾಗು ಕೋಚಿಮುಲ್ ಹಾಲು ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಂಡು ಪ್ರತಿಯೊಬ್ಬರೂ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಸರ್ಕಾರದಿಂದ ನೀಡುವ ಉಚಿತ ಸೈಕಲ್‌ಗಳನ್ನು ವಿದ್ಯಾರ್ಥಿಗಳ ಪೋಷಕರು ದುರುಪಯೋಗ ಮಾಡಿಕೊಳ್ಳಬಾರದು. ಮಕ್ಕಳು ಶಿಸ್ತು, ಶ್ರಮ ಮತ್ತು ಗುರಿಯನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕಿಗಳಾಗಿ ಬೆಳೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಹಾಗು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು ಇದರ ಸದುಪಯೋಗ ಪಡೆದುಕೊಂಡು ಹುಟ್ಟಿದ ಊರಿಗೆ ಕೀರ್ತಿಯನ್ನು ತರಬೇಕು ಎಂದರು.
ಕೋಚಿಮುಲ್ ಒಕ್ಕೂಟದಿಂದ ಈಗಾಗಲೇ ತಾಲ್ಲೂಕಿನಾದ್ಯಂತ ೮ ನೇ ತರಗತಿ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಲಾಗುತ್ತಿದೆ. ಒಕ್ಕೂಟದಿಂದ ವಿದ್ಯಾರ್ಥಿ ವೇತನ, ಅತಿ ಹೆಚ್ಚು ಅಂಕಗಳಿಸಿದವರಿಗೆ ಪೋತ್ಸಾಹ ಧನ ಸೇರಿದಂತೆ ವಿವಿಧ ಯೋಜನೆಗಳಿವೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಣ್ಣ, ಮುಖಂಡರಾದ ಮಳ್ಳೂರಯ್ಯ, ಬೈರೇಗೌಡ, ತಾಲ್ಲೂಕು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಹನುಮಂತರಾವ್, ಮುನೇಗೌಡ, ಬಾಲಸುಬ್ರಮಣಿ, ಪ್ರಭಾಕರ್ ರೆಡ್ಡಿ, ದೇವೆಗೌಡ, ವೆಂಕಟೇಶ್, ಅಥ್ಲೆಟಿಕ್ ಕ್ರೀಡಾಪಟು ನಾರಾಯಣಸ್ವಾಮಿ, ದೇವರಾಜು, ಸರ್ಕಾರಿ ಪ್ರೌಢಶಾಲೆಯ ಸಿಬ್ಬಂದಿ ಹಾಜರಿದ್ದರು.