ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಪಾಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಶಾಸಕ ಎಂ.ರಾಜಣ್ಣ ಮಾತನಾಡಿದರು. ಹೈನುಗಾರಿಕೆ ಲಾಭದಾಯಕ ಉದ್ದಿಮೆಯಾಗಿದ್ದು, ರೈತರ ಆರ್ಥಿಕ ಬೆನ್ನೆಲುಬಾಗಿದೆ ಎಂದು ಅವರು ತಿಳಿಸಿದರು.
ಬಯಲುಸೀಮೆ ಭಾಗದಲ್ಲಿ ಕೃಷಿ ಮಾಡಲು ನೀರಿಲ್ಲದೇ ಇರುವುದರಿಂದ ಈ ಭಾಗದ ರೈತರು ಹೈನುಗಾರಿಕೆಯನ್ನು ಹೆಚ್ಚು ಅವಲಂಬಿಸುವುದು ಸೂಕ್ತ. ತಾಲ್ಲೂಕಿನಾದ್ಯಂತ ಇರುವ ಸುಮಾರು ೨೦೮ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ದಿನನಿತ್ಯ ೧ ಲಕ್ಷ ೨೫ ಸಾವಿರ ಲೀಟರ್ ಹಾಲು ಉತ್ಪಾದಿಸುವ ಮೂಲಕ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಕೋಚಿಮುಲ್‌ನಿಂದ ಹಾಗೂ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆದು ಈ ಭಾಗದ ರೈತರು ಮತ್ತಷ್ಟು ಆರ್ಥಿಕವಾಗಿ ಮುಂದುವರೆಯಬೇಕು ಎಂದರು.
ಗ್ರಾಮೀಣ ಪ್ರದೇಶದ ಜನತೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ತಾಲ್ಲೂಕಿನಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದ್ದು ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಚಿಕ್ಕಪಾಪನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆಂಜಿನಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಾರಪ್ಪ, ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘುನಾಥ್, ಮುಖಂಡರಾದ ಕೆ.ಮಂಜುನಾಥ್, ಹರಿಬಾಬು, ರವಿಕುಮಾರ್, ಅಶ್ವತ್ಥಪ್ಪ, ಜಿ.ಟಿ.ನಾರಾಯಣಸ್ವಾಮಿ, ಶಿಡ್ಲಘಟ್ಟ ಶಿಬಿರ ಘಟಕದ ಉಪ ವ್ಯವಸ್ಥಾಪಕ ಹನುಮಂತರಾವ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -