ಗ್ರಾಮೀಣ ಭಾಗದ ಅಭಿವೃದ್ದಿಯ ಹಿತದೃಷ್ಠಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನರೇಗಾ ಯೋಜನೆಯಡಿ ತಾಲ್ಲೂಕಿನ ಎಲ್ಲಾ ೨೮ ಗ್ರಾಮ ಪಂಚಾಯಿತಿಗಳಲ್ಲಿಯೂ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನಿಡಲಾಗಿದೆ. ರೈತರು ಸೇರಿದಂತೆ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ ಹೇಳಿದರು.
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿಯ ಗುಡಿಹಳ್ಳಿ, ಹೊಸಪೇಟೆ ಗ್ರಾಮ ಪಂಚಾಯಿತಿಯ ಹಿರೇಬಲ್ಲ ಹಾಗೂ ಕಲ್ಯಾಪುರ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕೆರೆಗಳ ಹೂಳೆತ್ತುವ ಕಾಮಗಾರಿ ಸೇರಿದಂತೆ ಕುಡಿಯುವ ನೀರಿನ ಪೂರೈಕೆಗಾಗಿ ಗ್ರಾಮ ಪಂಚಾಯಿತಿಗಳು ಕೈಗೊಂಡಿರುವ ಕ್ರಮಗಳನ್ನು ವೀಕ್ಷಿಸಿ ಮಾತನಾಡಿದರು.
ಈಗಾಗಲೇ ಶಿಡ್ಲಘಟ್ಟ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಣೆ ಮಾಡಿದ್ದು ಜನರು ಕೆಲಸ ಅರಸಿ ಬೇರೆಡೆಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ನರೇಗಾ ಯೋಜನೆಯಡಿ ಕೆರೆಗಳ ಹೂಳೆತ್ತುವ ಕೆಲಸ ಪ್ರಾರಂಭಿಸಲಾಗಿದೆ. ಬರಗಾಲ ಇರುವುದರಿಂದ ಪ್ರತಿ ಕುಟುಂಬಕ್ಕೆ ೧೦೦ ದಿನಗಳ ಕೂಲಿ ಜೊತೆಗೆ ೫೦ ಹೆಚ್ಚುವರಿ ಕೂಲಿ ದಿನಗಳನ್ನು ಈ ಯೋಜನೆಯಡಿ ಕಲ್ಪಿಸಿದ್ದು ಒಟ್ಟಾರೆ ಒಂದು ಕುಟುಂಬಕ್ಕೆ ೧೫೦ ದಿನ ಕೂಲಿ ಹಾಗು ಪ್ರತಿ ದಿನಕ್ಕೆ ೨೪೯ ರೂ ಗಳಂತೆ ಕೂಲಿ ಪಾವತಿಸಲು ಕ್ರಮವಹಿಲಾಗಿದೆ ಎಂದರು.
ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಸೇರಿದಂತೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು. ಬರ ಪರಿಸ್ಥಿತಿ ಎದುರಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸಿದ್ಧರಿರಲು ಈಗಾಗಲೇ ಸೂಚನೆ ನೀಡಲಾಗಿದ್ದು ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಹಿಸಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ನರೇಗಾ ಸಹಾಯಕ ನಿದೇಶಕ ಸಿ.ಎಸ್.ಶ್ರೀನಾಥಗೌಡ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಕೆ.ಎಸ್.ಮಧು, ಜಯಶ್ರೀ, ನರೇಗಾ ಎಂಜಿನಿಯರ್ಗಳಾದ ಕಿಶೋರ್, ರಂಜಿತ್, ಅಶೋಕ್ಕುಮಾರ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







