Home News ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

0

ಮುಂದಿನ ಮಾರ್ಚ್ ೩೧ ರೊಳಗೆ ಶಿಡ್ಲಘಟ್ಟ ತಾಲ್ಲೂಕನ್ನು ಬಯಲು ಶೌಚ ಮುಕ್ತ ತಾಲ್ಲೂಕನ್ನಾಗಿ ಮಾಡಲು ಅಧಿಕಾರಿಗಳು ಸೇರಿದಂತೆ ಜನಪ್ರತಿಧಿಗಳು ಕೈ ಜೋಡಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖೆವಾರು ಪ್ರಗತಿ ಪರಿಶೀಲನೆ ಮಾಡಿದ ಅವರು, ತಾಲ್ಲೂಕಿನಾದ್ಯಂತ ೧೫,೫೫೦ ಶೌಚಾಲಯ ನಿರ್ಮಾಣ ಮಾಡುವ ಗುರಿ ಹೊಂದಿದ್ದು ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು ನಾಗರಿಕರ ಮನವೊಲಿಸುವ ಕೆಲಸಕ್ಕೆ ಮುಂದಾಗಬೇಕು ಎಂದರು.
ತಾಲ್ಲೂಕಿನಾದ್ಯಂತ ಇರುವ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿವೆಯಾದರೂ ಸೂಕ್ತ ನೀರಿನ ವ್ಯವಸ್ಥೆಯಿಲ್ಲದಿರುವುದರಿಂದ ನಿರ್ವಹಣೆಯಿಲ್ಲ ಎಂಬ ಅಧಿಕಾರಿಗಳ ಮಾಹಿತಿಗೆ ಸ್ಪಂದಿಸಿದ ಅವರು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶಾಲೆಗಳ ಶೌಚಾಲಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಯಿಂದ ಮಾಡಿಸುವಂತೆ ಕಾರ್ಯನಿರ್ವಾಹಣಾಧಿಕಾರಿಯವರಿಗೆ ಸೂಚಿಸಿದರು.
ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪೂರಕವಾಗಿ ಇಲಾಖೆ ಯಾವ ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ಬಿಇಓ ರಿಂದ ಮಾಹಿತಿ ಪಡೆದುಕೊಂಡ ಅವರು ಈ ಭಾರಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬರಲು ಬೇಕಾದ ಎಲ್ಲಾ ಕ್ರಮಗಳನ್ನು ಜರುಗಿಸುವಂತೆ ಸೂಚಿಸಿದರು.
ತಮ್ಮದೇ ಸ್ವಗ್ರಾಮ ಸೇರಿದಂತೆ ಕ್ಷೇತ್ರದಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಅಧಿಕಾರಿಗಳು ಕ್ಷೇತ್ರದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡುವುದಿಲ್ಲ ಎಂಬ ಸದಸ್ಯರ ಪ್ರಶ್ನೆಗೆ ಎಲ್ಲಾ ಅಧಿಕಾರಿಗಳು ಯಾವುದೇ ಕಾಮಗಾರಿ ಅಥವ ಕಾರ್ಯಕ್ರಮ ಆಯೋಜಿಸುವ ಮುನ್ನ ಆಯಾ ಕ್ಷೇತ್ರದ ಗ್ರಾಮ ಪಂಚಾಯಿತಿ ಹಾಗು ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಮಾಹಿತಿ ನೀಡುವುದನ್ನು ರೂಡಿಸಿಕೊಳ್ಳಬೇಕು ಎಂದರು.
ಸಿಡಿಪಿಓ ಲಕ್ಷ್ಮಿದೇವಮ್ಮ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೆಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ಪ್ರಗತಿಯ ಮಾಹಿತಿಯನ್ನು ನೀಡಿದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಇಓ ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಸದಸ್ಯರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

error: Content is protected !!