Home News ದೊಡ್ಡ ಚೊಕ್ಕಂಡಹಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ದೊಡ್ಡ ಚೊಕ್ಕಂಡಹಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

0

ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಚೊಕ್ಕಂಡಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಸುಮಾರು ೧೧ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯನ್ನು ಬಳಸಿಕೊಳ್ಳಿ ಎಂದು ಅವರು ತಿಳಿಸಿದರು.
ತಾಲ್ಲೂಕಿನಾದ್ಯಂತ ನರೇಗಾ ಯೋಜನೆಯಡಿ ಸುಸಜ್ಜಿತ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ. ಈ ಯೋಜನೆಯನ್ನು ಮತ್ತಷ್ಟು ಬಳಸಿಕೊಂಡು ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸವಲತ್ತುಗಳನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾಕ್ಕಾಗಿ ಹಣ ಕ್ರೋಡಿಕರಿಸುತ್ತಿರುವ ಹಿನ್ನಲೆಯಲ್ಲಿ ವಿವಿಧ ಯೋಜನೆಗಳಿಗೆ ಅನುಧಾನ ಕಡಿಮೆ ಸಿಗುತ್ತಿದೆ. ಹಾಗಾಗಿ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ರ ದೂರ ದೃಷ್ಟಿಯಿಂದ ಜಾರಿಗೆ ತಂದಂತಹ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಕೆಲಸಗಳನ್ನು ಮಾಡಿ ಎಲ್ಲರೂ ಆರ್ಥಿಕವಾಗಿ ಮುಂದುವರೆಯಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ನಡೆಯುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದೂ ಸೇರಿದಂತೆ ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು. ಈಗಾಗಲೇ ಈ ಭಾಗದ ಕೆರೆಗಳಿಗೆ ನೀರು ಹರಿಸುವ ಕೆಸಿ ವ್ಯಾಲಿ ಯೋಜನೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದ್ದು ಈ ಯೋಜನೆಯಿಂದ ಬರುವ ನೀರನ್ನು ಶೇಖರಿಸಲು ಕೆರೆ, ರಾಜಕಾಲುವೆಗಳನ್ನು ತೆರವುಗೊಳಿಸಲು ಅಧಿಕಾರಿಗಳೂ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ಶ್ರೀನಿವಾಸ್, ನರೇಗಾ ಸಹಾಯಕ ನಿರ್ದೇಶಕ ಶ್ರೀನಾಥಗೌಡ, ಶಿಶು ಅಭಿವೃದ್ಧಿ ಅಧಿಕಾರಿ ಲಕ್ಷ್ಮಿದೇವಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಗೌರಮ್ಮ, ಶ್ರೀನಿವಾಸ್, ಬಿ.ಎ.ಸುರೇಶ್, ಪಿಡಿಓ ಕೆ.ಮಧು, ರಾಮಕೃಷ್ಣಪ್ಪ, ಚನ್ನೇಗೌಡ, ಚನ್ನಕೃಷ್ಣಪ್ಪ, ಮಂಜುನಾಥ್, ಗುತ್ತಿಗೆದಾರ ರಾಜಶೇಖರ್, ಅಂಗನವಾಡಿ ಕಾರ್ಯಕರ್ತೆಯರಾದ ನಾಗರತ್ನ, ಜಯಂತಿ, ರತ್ನಮ್ಮ ಹಾಜರಿದ್ದರು.

error: Content is protected !!