ನಗರದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಳೆದ ೩೫ ವರ್ಷಗಳಿಂದ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎಸ್.ಕೆ.ಗೋಪಿನಾಥ್ ರವರಿಗೆ ಶಾಲಾ ಆಡಳಿತ ಮಂಡಳಿ, ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಸಿಬ್ಬಂದಿ ವರ್ಗದವರಿಂದ ಆಯೋಜಿಸಲಾಗಿದ್ದ ಆತ್ಮೀಯ ಬೀಳ್ಕೊಡುಗೆ ಸಮಾರಂಭದಲ್ಲಿ ಶ್ರೀ ಸರಸ್ವತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಶ್ರೀಕಾಂತ್ ಮಾತನಾಡಿದರು
ಸೇವಾವಧಿಯಲ್ಲಿ ಆಡಳಿತ ಮಂಡಳಿ ಹಾಗೂ ಮಕ್ಕಳ ಬೆಳವಣಿಗೆಗೆ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಿರುವುದಷ್ಟೇ ಅಲ್ಲದೇ ಅದನ್ನು ಅನುಷ್ಠಾನಗೊಳಿಸುವಲ್ಲಿ ೩೫ ವರ್ಷಗಳ ನಿಸ್ವಾರ್ಥ ಸೇವೆ ಸಲ್ಲಿಸಿದ ಶಾಲೆಯ ನಿವೃತ್ತ ಶಿಕ್ಷಕ ಎಸ್.ಕೆ.ಗೋಪಿನಾಥ್ ನಿಜಕ್ಕೂ ಅಭಿನಂದನಾರ್ಹರು ಎಂದು ಅವರು ಹೇಳಿದರು.
೧೯೮೩ ರಲ್ಲಿ ಸಂಸ್ಥೆಯ ಸಹ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಇವರು ನಂತರ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಮಕ್ಕಳಲ್ಲಿ ವಿವಿಧ ರೀತಿಯ ಪಠ್ಯ, ಪಠ್ಯೇತರ ಚಟುವಟಿಕೆ, ಕ್ರೀಡಾ ಚಟುವಟಿಕೆಗಳಿಗೆ ಇವರು ನೀಡುತ್ತಿದ್ದ ಪ್ರೋತ್ಸಾಹ, ಸಿಬ್ಬಂದಿಯ ಜೊತೆಗಿನ ಸಹಮತ, ವಿವಿಧ ಕಚೇರಿಗಳಲ್ಲಿ ಕೆಲಸ ಮಾಡಿಸಿಕೊಂಡು ಬರುತ್ತಿದ್ದ ಕೌಶಲ್ಯ ಅದ್ಭುತವಾಗಿತ್ತು. ಕಳೆದ ೩೫ ವರ್ಷಗಳ ಕಾಲ ನಮ್ಮ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾಗುತ್ತಿರುವ ಶಿಕ್ಷಕ ಎಸ್,ಕೆ.ಗೋಪಿನಾಥ್‌ರ ವಿಶ್ರಾಂತಿ ಜೀವನ ಸುಖವಾಗಿರಲಿ ಎಂದು ಆಶಿಸಿದರು.
ನಿವೃತ್ತ ಶಿಕ್ಷಕ ಬಿ.ವಿ.ಗೋಪಿನಾಥ್ ಮಾತನಾಡಿ, ಸತತ ೩೫ ವರ್ಷ ನಾಲ್ಕು ತಿಂಗಳು ಈ ಶಾಲೆಯಲ್ಲಿ ಶಿಕ್ಷಕ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ, ನನ್ನ ಸೇವಾವಧಿಯಲ್ಲಿ ತುಂಬಾ ಸಂತೋಷವಾಗಿ ಕಾರ್ಯ ನಿರ್ವಹಿಸಿದ್ದೇನೆ, ಇದಕ್ಕೆಲ್ಲಾ ಕಾರಣರಾದ ಶಾಲಾ ಆಡಳಿತ ಮಂಡಳಿ ಹಾಗೂ ನಮ್ಮ ಸಿಬ್ಬಂದಿ ವರ್ಗಕ್ಕೆ ಆಭಾರಿಯಾಗಿರುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ನಾಗಲಕ್ಷ್ಮಿ, ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
- Advertisement -
- Advertisement -
- Advertisement -