ತಾಲ್ಲೂಕಿನಾದ್ಯಂತ ಆಶ್ರಯ ಯೋಜನೆಯಡಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಜಿಲ್ಲಾಧಿಕಾರಿಗಳಿಂದ ಅನುಮೋದನೆಯಾಗಿರುವಂತಹ ಜಮೀನಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇಲಿ ನಿರ್ಮಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಆಶ್ರಯ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡುವುದು ಮತ್ತು ವಸತಿ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಪಿಡಿಓ ಗಳು ಹಾಗೂ ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ವೆಂಕಟೇಶ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಗೋಮಾಳಗಳಲ್ಲಿ ಈಗಾಗಲೇ ಮನೆಗಳನ್ನು ನಿರ್ಮಿಸಿಕೊಂಡಿರುವವರಿಗಾಗಿ ಸರ್ಕಾರ ಅಕ್ರಮ ಸಕ್ರಮದಲ್ಲಿ ಖಾತೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಹಾಗಾಗಿ ಆಯಾ ಗ್ರಾಮ ಪಂಚಾಯಿತಿ ಪಿಡಿಓಗಳು ಮತ್ತು ಕಾರ್ಯದರ್ಶಿಗಳು ಅಂತಹವರಿಂದ ಅರ್ಜಿ ಸಲ್ಲಿಸಲು ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ ಎಂದರು. ಆದ್ಯತೆ ಮೇರೆಗೆ ಪಿಡಿಓಗಳು ಕರ್ತವ್ಯ ನಿರ್ವಹಿಸಬೇಕು ಎಂದರು.
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೮೯ ಫಲಾನುಭವಿಗಳು, ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೫೨ ಫಲಾನುಭವಿಗಳು, ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ೯೬ ಫಲಾನುಭವಿಗಳು, ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಯ ೮೦ ಫಲಾನುಭವಿಗಳು, ಹಂಡಿಗನಾಳ ಗ್ರಾಮ ಪಂಚಾಯಿತಿಯ ೪೨೦ ಫಲಾನುಭವಿಗಳ ಪಟ್ಟಿಯನ್ನು ಈ ಸಂದರ್ಭದಲ್ಲಿ ಅನುಮೋದಿಸಲಾಯಿತು.
ಈ ಪೈಕಿ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿ ೧೧೪ ಮಂದಿ ಫಲಾನುಭವಿಗಳ ಪಟ್ಟಿ ಅನುಮೋದನೆ ನೀಡಿದೆ. ಗುಡ್ಲನರಸಿಂಹನಹಳ್ಳಿಯ ೮೩ ಮಂದಿ ಫಲಾನುಭವಿಗಳಿಗೆ ನಿವೇಶನ ಹಂಚಲು ಗ್ರಾಮದಿಂದ ಸುಮಾರು ಎರಡು ಕಿ.ಮೀ ದೂರವಿರುವ ಸರ್ವೇ ನಂ ೧೯ ರಲ್ಲಿ ಭೂಮಿ ಮಂಜೂರಾಗಿದೆ. ಆದರೆ ಫಲಾನುಭವಿಗಳು ಗ್ರಾಮದ ಬಳಿಯಿರುವ ಸರ್ವೇ ನಂ ೩೯ ರಲ್ಲಿ ನಮಗೆ ನಿವೇಶನ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಅನುಮೋದನೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ಸರ್ಕಾರದಿಂದ ಮಂಜೂರಾಗಿರುವ ಮುಚ್ಚಾಟಲದಿನ್ನೇ ಗ್ರಾಮದ ಭೂಮಿ ಇದೀಗ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಗೆ ಸೇರಿದ್ದು ಎರಡೂ ಪಂಚಾಯಿತಿಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪತ್ರ ಮುಖೇನ ಚರ್ಚೆ ನಡೆಸಿ ನಿವೇಶನ ರಹಿತ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅನುಸೂಯಮ್ಮ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಮೋಹನ್ಕುಮಾರ್, ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -