ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಡಿ.ವೈ.ಎಸ್.ಪಿ.ಕೃಷ್ಣಮೂರ್ತಿ ಅವರನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ವದಂತಿ ಕೇಳಿಬರುತ್ತಿದ್ದು ಯಾವುದೇ ಕಾರಣಕ್ಕೂ ನಿಷ್ಠಾವಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ಒತ್ತಾಯಿಸಿದರು.
ಶಿಡ್ಲಘಟ್ಟದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವು ರಾಜಕೀಯ ಮುಖಂಡರುಗಳು ತಮ್ಮ ಅನುಕೂಲಕ್ಕೆ ತಕ್ಕಂತಹ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ಜಿಲ್ಲೆಯಿಂದ ನಿಷ್ಠಾವಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಲು ಪ್ರಯತ್ನ ಮಾಡುತ್ತಿರುವುದಾಗಿ ಕೇಳಿಬರುತ್ತಿವೆ.
ಚಿಂತಾಮಣಿ ವಿಭಾಗದಲ್ಲಿ ಬಡವರ ಹಾಗೂ ದಲಿತರ ಪರ ಡಿ.ವೈ.ಎಸ್.ಪಿ.ಕೃಷ್ಣಮೂರ್ತಿ ಅವರು ನ್ಯಾಯಯುತವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ವರ್ಗಾವಣೆ ಮಾಡಿಸಲು ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಯಾವುದೇ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡಬಾರದು ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಗೃಹಸಚಿವರಿಗೂ ಮನವಿ ಸಲ್ಲಿಸುತ್ತೇವೆ ಎಂದರು.
ಡಿ.ವೈ.ಎಸ್.ಪಿ.ಕೃಷ್ಣಮೂರ್ತಿ ಅವರು ನೇಮಕವಾದ ನಂತರ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಕಡಿಮೆಯಾಗಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಕುಂದು ಕೊರತೆ ಸಭೆಗಳನ್ನು ನಡೆಸಿ ಬಡವರು, ತೊಂದರೆಗೊಳಗಾದವರಿಗೆ ನ್ಯಾಯ ಒದಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಿಷ್ಠಾವಂತ ಅಧಿಕಾರಿಗಳಿಗೆ ಪ್ರೋತ್ಸಾಹ ನೀಡಬೇಕು. ಜನಪ್ರತಿನಿಧಿಗಳಿಗೆ ಏನಾದರೂ ತೊಂದರೆಯಿದ್ದರೆ ಮಾತಾಡುವ ಮೂಲಕ ಪರಿಹರಿಸಿಕೊಳ್ಳಬೇಕು. ಅನಗತ್ಯವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಜನರಿಗೆ ತೊಂದರೆ ಕೊಟ್ಟಲ್ಲಿ ಮುಂದಿನ ದಿನಗಳಲ್ಲಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ದಡಂಘಟ್ಟ ತಿರುಮಲೇಶ್, ರಾಜ್ಯ ವಿಭಾಗ ಸಂಚಾಲಕ ಲಕ್ಷೀನಾರಾಯಣ, ದಿಬ್ಬೂರಹಳ್ಳಿ ನರಸಿಂಹಪ್ಪ, ಬೈರಸಂದ್ರ ದೇವರಾಜ್, ಜನಾರ್ಧನ್‌ಬಾಬು, ಗೊರ್ಲಪ್ಪ, ಸುಬ್ರಮಣಿ, ಮುನಾಂಜಿ ಹಾಜರಿದ್ದರು.