Home News ನೀರಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ನೀರಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

0

ನೀರಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸಿದರು.
ಬಯಲು ಸೀಮೆ ಜಿಲ್ಲೆಗಳಿಗೆ ಪರಮಶಿವಯ್ಯನವರ ವರದಿಯಾಧಾರಿತ ಶಾಶ್ವತ ನೀರಾವರಿ ಯೋಜನೆ ತಕ್ಷಣ ಜಾರಿಗೊಳಿಸಬೇಕು. ಬೇಸಿಗೆಯಿಂದಾಗಿ ತಾಲ್ಲೂಕಿನಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಗ್ರಾಮೀಣ ಭಾಗದಲ್ಲಿ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ಜಾನುವಾರುಗಳಿಗೆ ಮೇವನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ವಿತರಿಸಬೇಕು ಮತ್ತು ಗೋಶಾಲೆಗಳನ್ನು ತೆರೆಯಬೇಕು. ಕೆರೆಗಳಲ್ಲಿ ಹೂಳೆತ್ತಿಸಬೇಕು, ರಾಜಕಾಲುವೆಗಳನ್ನು ತೆರವುಗೊಳಿಸಬೇಕು ಹಾಗೂ ಪ್ರತಿ ಹಳ್ಳಿಗೆ ಹೋಗುವ ರಸ್ತೆಗಳ ಬದಿಯಲ್ಲಿ ಸಸಿಗಳನ್ನು ನೆಟ್ಟು ಪೋಷಣೆಯ ಜವಾಬ್ದಾರಿ ಗ್ರಾಮ ಪಂಚಾಯತಿಗಳಿಗೆ ವಹಿಸಬೇಕು. ಸರ್ಕಾರಿ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ಕೃಷಿ ಹೊಂಡಕ್ಕೆ ಶೇಕಡಾ 80 ರಷ್ಟು ಸಹಾಯದನ ನೀಡಬೇಕೆಂಬ ಮನವಿಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲು ತಹಶೀಲ್ದಾರರಿಗೆ ಸಲ್ಲಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಮುನಿಕೆಂಪಣ್ಣ, ಪ್ರಧಾನ ಕಾರ್ಯದರ್ಶಿ ಬಾಲಮುರಳಿಕೃಷ್ಣ, ಪ್ರತೀಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.