ನವೆಂಬರ್ ತಿಂಗಳಿನಲ್ಲಿ ಖಡ್ಡಾಯವಾಗಿ ತಾಲ್ಲೂಕಿನ ಎಲ್ಲಾ ಚಿತ್ರಮಂದಿರಗಳಲ್ಲೂ ಕನ್ನಡ ಚಲನಚಿತ್ರ ಪ್ರದರ್ಶಿಸುವ ಮೂಲಕ ನಾಡು ಮತ್ತು ನುಡಿಗೆ ಗೌರವ ಸಲ್ಲಿಸಬೇಕು. ಪರಭಾಷೆ ಚಿತ್ರವನ್ನು ಪ್ರದರ್ಶಿಸುತ್ತಿರುವ ಚಿತ್ರಮಂದಿರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾನ ಮನಸ್ಕರ ಹೋರಾಟ ಸಮಿತಿಯ ಸದಸ್ಯರು ಒತ್ತಾಯಿಸಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಅವರಿಗೆ ಬುಧವಾರ ಮನವಿಯನ್ನು ಸಲ್ಲಿಸಿದ ಸಮಾನ ಮನಸ್ಕರ ಹೋರಾಟ ಸಮಿತಿಯ ಸದಸ್ಯರು, ಕನ್ನಡದ ಬಗ್ಗೆ ಗೌರವವಿಲ್ಲದೆ ಈಗಾಗಲೇ ಹಲವು ಚಿತ್ರಮಂದಿರಗಳಲ್ಲಿ ತೆಲುಗು ಚಿತ್ರವನ್ನು ಪ್ರದರ್ಶಿಸುತ್ತಿದ್ದರೂ ನೀವು ಕ್ರಮ ಕೈಗೊಂಡಿಲ್ಲ. ನವೆಂಬರ್ ತಿಂಗಳಿನಲ್ಲಿ ಪರಭಾಷೆ ಚಿತ್ರವನ್ನು ಪ್ರದರ್ಶಿಸದಂತೆ ಸೂಚನೆ ನೀಡಿ. ತಾಲ್ಲೂಕಿನ ಎಲ್ಲಾ ಖಾಸಗಿ ಅಂಗಡಿ ಮುಂಗಟ್ಟುಗಳು, ಕಚೇರಿಗಳ ಮೇಲೆ ಕನ್ನಡದ ಅಕ್ಷರದಲ್ಲಿ ನಾಮಫಲಕ ಹಾಕುವಂತೆ ಆದೇಶ ನೀಡಬೇಕೆಂದು ಮನವಿ ಮಾಡಿದರು.
ತಾಲ್ಲೂಕಿನ ಚಿತ್ರಮಂದಿರಗಳಲ್ಲಿ ಪರಭಾಷೆ ಚಿತ್ರಗಳನ್ನು ಪ್ರದರ್ಶನ ಮಾಡಿದ್ದಲ್ಲಿ ತಾಲ್ಲೂಕಿನ ಎಲ್ಲಾ ಕನ್ನಡಪರ, ರೈತಪರ, ದಲಿತಪರ, ಅಲ್ಪಸಂಖ್ಯಾತರ ಪರ ಸಂಘಟನೆಗಳು ಒಗ್ಗೂಡಿ ಆ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುತ್ತೇವೆ. ಅದಕ್ಕೆ ನೇರ ಹೊಣೆ ತಾಲ್ಲೂಕು ಆಡಳಿತವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಮಾನ ಮನಸ್ಕರ ಹೋರಾಟ ಸಮಿತಿಯ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹುಸೇನ್ಸಾಬ್, ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಭಕ್ತರಹಳ್ಳಿ ಪ್ರತೀಶ್, ಟಿಪ್ಪುಸುಲ್ತಾನ್ ಸಂಘದ ತಾಲ್ಲೂಕು ಅಧ್ಯಕ್ಷ ಅಫ್ಜಲ್ ಪಾಷ, ಮಹಮ್ಮದ್ ಅಸಾದ್, ಅಪ್ಪೇಗೌಡನಹಳ್ಳಿ ತ್ಯಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -