ತಾಲ್ಲೂಕಿನ ಬಹುತೇಕ ಕಾಂಗ್ರೆಸ್ ಆಡಳಿತವಿರುವ ಗ್ರಾಮ ಪಂಚಾಯತಿಗಳಲ್ಲಿ ಬಸವ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಯು ಏಕಪಕ್ಷೀಯವಾಗಿ ನಡೆದಿದೆ. ಬಡವರಿಗೆ ಅನ್ಯಾಯವಾಗಿದೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಬಸವ ವಸತಿ ಯೋಜನೆಯಡಿ 49 ಮನೆಗಳು ಮಂಜೂರಾಗಿವೆ. ಶಾಸಕರ ಅನುದಾನದಲ್ಲಿ 30 ಮನೆ ಮತ್ತು ಇಂದಿರಾ ಆವಾಸ್ ಯೋಜನೆಯಡಿ 19 ಮನೆಗಳು ಮಂಜೂರಾಗಿವೆ. ಯಾವುದೇ ವಾರ್ಡ್ ಸಭೆ ನಡೆಸದೆ ಏಕಪಕ್ಷೀಯವಾಗಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ತೀರ್ಮಾನಿಸಿ ಫಲಾನುಭವಿಗಳ ಆಯ್ಕೆ ಮಾಡಿದ್ದಾರೆ. ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ 8 ಸ್ಥಾನಗಳು, ಜೆಡಿಎಸ್ ಬೆಂಬಲಿತ 7 ಸ್ಥಾನಗಳಿವೆ. ಜೆಡಿಎಸ್ ಬೆಂಬಲಿತ ಸದಸ್ಯರನ್ನು ಪರಿಗಣನೆಗೆ ತೆಗೆದುಕೊಳ್ಳದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಹೆಚ್ಚು ಮನೆಗಳನ್ನು ಮಂಜೂರು ಮಾಡುವ ಮೂಲಕ ಪಕ್ಷಪಾತ ಧೋರಣೆಯನ್ನು ಅನುಸರಿಸಿದ್ದಾರೆ. ನಿಜವಾದ ನಿವೇಶನ ರಹಿತ ಫಲಾನುಭವಿಗಳಿಗೆ ಸಿಗಬೇಕಾದ ಉದ್ದೇಶವಿರುವ ಸರ್ಕಾರದ ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಲಿಯಾಗಿರುವುದು ದುರ್ಧೈವ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ ದೂರಿದರು.
ವಸತಿ ಯೋಜನೆಯ ಜಾಗೃತಿ ಸಮಿತಿ ಸಭೆಯನ್ನು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಶಾಸಕ ಎಂ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಬೇಕಿತ್ತು. ಆದರೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ತಾಲ್ಲೂಕು ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರಿಂದಾಗಿ ಸಭೆಯು ಮುಂದೂಡಲ್ಪಟ್ಟಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ರಾಜೀನಾಮೆ ನೀಡಬೇಕು. ಕಾರ್ಯದರ್ಶಿ ನಾಗರಾಜಯ್ಯ ಅವರನ್ನು ಅಮಾನತ್ತು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
- Advertisement -
- Advertisement -
- Advertisement -
- Advertisement -