Home News ಬಿಜಿಎಸ್ ಪಬ್ಲಿಕ್ ಸ್ಕೂಲ್ ಹಾಗು ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

ಬಿಜಿಎಸ್ ಪಬ್ಲಿಕ್ ಸ್ಕೂಲ್ ಹಾಗು ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

0

ಪೋಷಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರೊಂದಿಗೆ ಸಹಕಾರ ನೀಡಬೇಕು ಎಂದು ಚಿಕ್ಕಬಳ್ಳಾಪುರ ಶಾಖಾ ಮಠದ ಸ್ವಾಮಿಜಿ ಮಂಗಳಾನಂದನಾಥ ಸ್ವಾಮೀಜಿ ಭಿಪ್ರಾಯಪಟ್ಟರು.
ಪಟ್ಟಣದ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ಪಬ್ಲಿಕ್ ಸ್ಕೂಲ್ ಹಾಗು ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಸಿಂಚನ-2015 ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪದ್ಮಭೂಷಣ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಕನಸಿನಂತೆ ಶಿಡ್ಲಘಟ್ಟ ಹಾಗೂ ಸುತ್ತಮುತ್ತಲ ಪ್ರಾಂತಗಳಲ್ಲಿನ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿ, ಅವರನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ಮಾಡುವುದು ಬಿಜಿಎಸ್ ವಿದ್ಯಾ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಎಲ್ಲಾ ದಾನಗಳಿಗಿಂತ ವಿದ್ಯಾದಾನ ಶ್ರೇಷ್ಠವಾದದು ಎಂಬ ಮಾತಿನಂತೆ ರಾಜ್ಯಾದ್ಯಂತ ಸುಮಾರು 450 ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಲಾಗಿದ್ದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವುದೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಎಷ್ಟಿದೆಯೋ ಅಷ್ಟೇ ಪಾತ್ರ ಪೋಷಕರಿಗೂ ಇದೆ ಎಂದ ಅವರು ಕೇವಲ ಮಕ್ಕಳನ್ನು ಶಾಲೆಗೆ ಕಳುಹಿಸಿದರಷ್ಟೇ ಪೋಷಕರ ಕೆಲಸ ಮುಗಿಯುವುದಿಲ್ಲ ಬದಲಿಗೆ ತಿಂಗಳಿಗೊಮ್ಮೆ ತಮ್ಮ ಮಗು ಓದುವ ಶಾಲೆಗೆ ಭೇಟಿ ನೀಡಿ ತಮ್ಮ ಮಗುವಿನ ವಿದ್ಯಾಭ್ಯಾಸದ ಕುರಿತು ಶಿಕ್ಷಕರೊಂದಿಗೆ ಚರ್ಚಿಸುವ ಕೆಲಸವನ್ನು ಮಾಡಬೇಕು ಎಂದರು.
ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಂದ ಆಯೋಜನೆ ಮಾಡಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನಸೆಳೆದವು. ಇದೇ ಸಂದರ್ಭದಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರೊ.ಶಿವರಾಮರೆಡ್ಡಿ, ಬಿಜಿಎಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಆರ್.ಮಹದೇವಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಭಕ್ತರಹಳ್ಳಿ ಬೈರೇಗೌಡ, ಕೆಂಪರೆಡ್ಡಿ, ರಾಮಚಂದ್ರಾಚಾರಿ, ಮತ್ತಿತರರು ಹಾಜರಿದ್ದರು.