ಸಾಮಾನ್ಯ ಜನರೊಂದಿಗೆ ಬೆರೆತು ಅವರಿಗೆ ಉತ್ತಮವಾದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮಾರ್ಚ್ ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದ ಹರ್ಷೋದಯ ಕನ್ವೆಂಷನ್ ಹಾಲ್ನಲ್ಲಿ ಬೆಂಗಳೂರು ವಿಭಾಗ ಮಟ್ಟದ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಗುರುರಾಜರಾವ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಿ ನೌಕರರ ವೇತನ ಮಾದರಿಯಲ್ಲೆ ರಾಜ್ಯ ಸರ್ಕಾರಿ ನೌಕರರಿಗೆ ವೇತನವನ್ನು ಜಾರಿಗೊಳಿಸಿ, ತಾರತಮ್ಯ ನೀತಿಯನ್ನು ತೊಲಗಿಸಬೇಕು. ವೇತನ ಆಯೋಗವನ್ನು ರದ್ದುಗೊಳಿಸಬೇಕು. ದೇಶದ ೨೪ ರಾಜ್ಯಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲೆ ರಾಜ್ಯ ಸರ್ಕಾರಿ ನೌಕರರಿಗೂ ವೇತನವನ್ನು ನೀಡಲಾಗುತ್ತಿದ್ದು, ರಾಜ್ಯ ಸರ್ಕಾರವು ಆರ್ಥಿಕ ಪರಿಸ್ಥಿತಿಯಲ್ಲಿ ೭ ನೇ ಸ್ಥಾನದಲ್ಲಿದೆ. ಬಜೆಟ್ನಲ್ಲಿ ವೇತನಕ್ಕಾಗಿ ಪ್ರತ್ಯೇಕವಾಗಿ ಅನುದಾನ ಮೀಸಲಿಡಬೇಕು, ಸರ್ಕಾರಿ ನೌಕರರು ವಾರ್ಷಿಕವಾಗಿ ೬,೫೦೦ ಕೋಟಿ ರೂಪಾಯಿಗಳ ತೆರಿಗೆಯನ್ನು ಪಾವತಿ ಮಾಡುತ್ತಿದ್ದೇವೆ. ಜನವರಿ ೨೦೧೬ ರಿಂದ ಪೂರ್ವಾನ್ವಯವಾಗುವಂತೆ ವೇತನ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ, ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಸಮಾವೇಶಕ್ಕೆ ತಾಲ್ಲೂಕಿನಿಂದ ೪೦೦ ಮಂದಿ ನೌಕರರು ಭಾಗವಹಿಸಲಿದ್ದಾರೆ. ಎಲ್ಲಾ ಇಲಾಖೆಗಳಲ್ಲಿ ಓ.ಓ.ಡಿಗೆ ಮನವಿ ಸಲ್ಲಿಸಲಾಗಿದ್ದು, ಓ.ಓ.ಡಿ.ನೀಡದಿದ್ದರೆ, ಸಾಮೂಹಿಕ ರಜೆಯನ್ನು ಹಾಕಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಕೋರಿದರು.
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಸುಬ್ಬಾರೆಡ್ಡಿ, ಕೇಶವರೆಡ್ಡಿ, ಅಕ್ಕಲರೆಡ್ಡಿ, ಲಲಿತಮ್ಮ, ಬಿ.ವಿ.ಶ್ರೀರಾಮಯ್ಯ, ಪದ್ಮಾವತಿ, ವೀಣಾ, ಅಂಗಪ್ಪ, ರಾಮಚಂದ್ರಪ್ಪ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -