ಮದ್ಯಪಾನವು ಅಮಲು ತರಿಸುವ ರೋಗವಾಗಿದ್ದು, ಮನುಷ್ಯನ ದೈಹಿಕ, ಮಾನಸಿಕ ಆರೋಗ್ಯವನ್ನು ಕೆಡಿಸಿ ಕೌಟುಂಬಿಕ, ಸಾಮಾಜಿಕವಾಗಿ ಕೆಟ್ಟ ಪರಿಣಾಮವನ್ನು ಬೀರಿ ಘನತೆ ಗೌರವವನ್ನು ಬೀದಿ ಪಾಲು ಮಾಡುತ್ತದೆ. ಮದ್ಯವ್ಯಸನದಿಂದ ಮುಕ್ತರನ್ನಾಗಿಸುವ ಶಿಬಿರವನ್ನು ಜಿಲ್ಲೆಯಲ್ಲಿಯೇ ಮೊಟ್ಟ ಮೊದಲ ಬಾರಿಗೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರಾಧಾಕೃಷ್ಣರಾವ್ ತಿಳಿಸಿದರು.
ನಗರದ ಕಾಳಿಕಾಂಭ ಕಮಠೇಶ್ವರ ಸಮುದಾಯ ಭವನದಲ್ಲಿ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮದ್ಯವರ್ಜನ ಶಿಬಿರದ ಸಮಿತಿ ರಚನೆಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಅಮಲು ರೋಗಿಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡಲು ಎಂಟು ದಿನಗಳ ಶಿಬಿರವನ್ನು ತಾಲ್ಲೂಕಿನ ವರದನಾಯಕನಹಳ್ಳಿಯ ಪಟಾಲಮ್ಮ ದೇವಾಲಯದ ಸಮುದಾಯ ಭವನದಲ್ಲಿ ಆಯೋಜಿಸಲಿದ್ದೇವೆ. ಅದಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳ ಸಮಿತಿಯನ್ನು ರಚಿಸುತ್ತಿದ್ದು, ಶಿಬಿರದಲ್ಲಿ ವಿವಿಧ ತಜ್ಞ ಸಂಪನ್ಮೂಲ ವ್ಯಕ್ತಿಗಳು, ಸಾಂಸ್ಕೃತಿಕ ಪರಿಣಿತರು ಭಾಗವಹಿಸುವರು ಎಂದು ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಇದುವರೆಗೂ ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಜನರನ್ನು ಮದ್ಯದಿಂದ ಮುಕ್ತರನ್ನಾಗಿಸಲಾಗಿದೆ. ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪ್ರಥಮ ಶಿಬಿರ ನಡೆಯಲಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ದೇವರಾಜ್, ಗೌರವಾಧ್ಯಕ್ಷರಾಗಿ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಪ್ರಭಾವತಿ ಸುರೇಶ್, ಅಪ್ಪೇಗೌಡನಹಳ್ಳಿ ಎ.ಎಂ.ತ್ಯಾಗರಾಜ್, ಹಿತ್ತಲಹಳ್ಳಿ ಮುನಿರಾಜು, ಕಾರ್ಯದರ್ಶಿ ಮಾಣಿಕ್ಯಮ್ಮ, ಕೋಶಾಧಿಕಾರಿ ಬೆಳ್ಳೂಟಿ ರಮೇಶ್ ಅವರನ್ನು ಆಯ್ಕೆ ಮಾಡಲಾಯಿತು.
ನಗರಸಭಾ ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಸದಸ್ಯ ಬಾಲಕೃಷ್ಣ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಮೋಹನ್, ಆಟೋ ನಾರಾಯಣಸ್ವಾಮಿ, ಮೇಲ್ವಿಚಾರಕರಾದ ಶಶಿಕುಮಾರ್, ಮಮತ, ಸೇವಾಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -