ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಕಟ್ಟಡಗಳಲ್ಲಿ ನರೇಗಾ ಯೋಜನೆಯಡಿ ಮಳೆ ನೀರು ಸಂಗ್ರಹಿಸಲು ಬೇಕಾದ ಅಗತ್ಯ ಕ್ರಮ ಜರುಗಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ತಾಲ್ಲೂಕಿನಾಧ್ಯಂತ ಬೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ಸುಮಾರು ೧೫೦೦-೧೬೦೦ ಅಡಿ ಆಳದ ಕೊಳವೆ ಬಾವಿಯಿಂದ ನೀರು ತೆಗೆಯಲಾಗುತ್ತಿದೆ. ಹಾಗಾಗಿ ಮಳೆ ನೀರನ್ನು ಸಂಗ್ರಹಿಸಲು ಮಳೆ ಕೊಯ್ಲು ಅಳವಡಿಸುವುದು ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಹೂಳೆತ್ತಲು ಅಗತ್ಯ ಕ್ರಮ ಜರುಗಿಸುವಂತೆ ಸೂಚಿಸಿದರು.
ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯು ಈ ಭಾಗದ ಪಾಲಿಗೆ ವರದಾನವಾಗಿದ್ದು ಒಂದೊಂದು ಗ್ರಾಮ ಪಂಚಾಯಿತಿಗೆ ವರ್ಷಕ್ಕೆ ಸುಮಾರು ಒಂದು ಕೋಟಿ ಅನುದಾನ ನರೇಗಾ ಯೋಜನೆಯಡಿ ಸಿಗುತ್ತಿದೆ. ಇಷ್ಟೊಂದು ಬೃಹತ್ ಮೊತ್ತದ ಹಣ ಹಿಂದೆಂದೂ ಗ್ರಾಮ ಪಂಚಾಯಿತಿಗಳಿಗೆ ಸಿಗುತ್ತಿರಲಿಲ್ಲ. ಹಾಗಾಗಿ ನರೇಗಾ ಯೋಜನೆಯಡಿ ಹೆಚ್ಚು ಹೆಚ್ಚು ಕೆಲಸಗಳನ್ನು ಮಾಡಿಸುವ ಮೂಲಕ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜನರಿಗೆ ಅಗತ್ಯ ಮೂಲಭೂತ ಸವಲತ್ತುಗಳನ್ನು ಕಲ್ಪಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆಯ ಬಗ್ಗೆ ಆರೋಗ್ಯ ಸಚಿವರಿಗೆ ಪತ್ರ ಬರೆಯುವಂತೆ ಸೂಚಿಸಿದ ಶಾಸಕರು, ತಾಲ್ಲೂಕಿನ ಬಶೆಟ್ಟಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರ್ಮಾಣಕ್ಕಾಗಿ ಈಗಾಗಲೇ ೧ ಕೋಟಿ ೮೦ ಲಕ್ಷದ ಟೆಂಡರ್ ಕಾರ್ಯ ಮುಗಿದಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪೊಲೀಸರೊಂದಿಗೆ ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಕ್ರಮ ಜರುಗಿಸಿ ಎಂದರು.
ಪಂಚಾಯತ್ ರಾಜ್ ತಾಂತ್ರಿಕ ಉಪ ವಿಭಾಗದಿಂದ ಈಗಾಗಲೇ ಪ್ರಾರಂಬಿಸಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಟೆಂಡರ್ ಆಗಿ ಈವೆರಗೂ ಕಾಮಗಾರಿ ಆರಂಬಿಸದ ಗುತ್ತಿಗೆದಾರರನ್ನು ಕೈ ಬಿಟ್ಟು ಬೇರೆಯವರಿಗೆ ಕಾಮಗಾರಿಯ ಟೆಂಡರ್ ನೀಡಿ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಿ ಎಂದರು.
ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳಲ್ಲಿ ಆಗಿರುವ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅರ್ಹಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ತಹಸೀಲ್ದಾರ್ ಎಂ.ದಯಾನಂದ್ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -