Home News ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಕಾಲೇಜು ವಾರ್ಷಿಕೋತ್ಸವ

ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಕಾಲೇಜು ವಾರ್ಷಿಕೋತ್ಸವ

0

ತಾಲ್ಲೂಕಿನ ಮಳ್ಳೂರು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ 2019-20 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಉದ್ಘಾಟನೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಸೀತಾರಾಮರೆಡ್ಡಿ ಮಾತನಾಡಿದರು.
ಬದುಕು ಹೆಜ್ಜೆ ಹೆಜ್ಜೆಗೂ ಪಾಠ ಕಲಿಸುತ್ತದೆ. ಉತ್ತಮ ಜೀವನಕ್ಕೆ ಮಾರ್ಗದರ್ಶನ ಮಾಡುವವರೆಲ್ಲರೂ ಗುರುಗಳೇ. ಹಾಗಾಗಿ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆದಲ್ಲಿ ಸಾಧಕರಾಗಬಹುದು ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳು ಮಾನದಂಡವಲ್ಲ, ಅವರ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ. ಮಕ್ಕಳು ಸಮಯಪಾಲನೆ ಮಾಡುವುದನ್ನು ಕಲಿಯಬೇಕಾಗಿದೆ. ಶಿಕ್ಷಣ ಸಂಸ್ಥೆಗಳು ಇದನ್ನು ಮಾಡಬೇಕು. ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿ, ದೇಶದ ಮಾನವ ಸಂಪನ್ಮೂಲವನ್ನು ಅಭಿವೃದ್ಧಿ ಪಡಿಸಬೇಕಾಗಿರುವ ಹೊಣೆಗಾರಿಕೆ ನಮ್ಮದು. ಜಾತ್ಯತೀತ ರಾಷ್ಟ್ರದಲ್ಲಿ ಬದುಕುತ್ತಿರುವ ನಾವು ಸಮಗ್ರ ರಾಷ್ಟ್ರದ ಅಭಿವೃದ್ಧಿಯಲ್ಲಿ ಭಾಗವಹಿಸಬೇಕು. ದೇಶದ ಅಭಿವೃದ್ಧಿ ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿದೆ.
ಮುಂದಿನ ಪೀಳಿಗೆಯನ್ನು ಸ್ಪರ್ಧಾತ್ಮಕ ಯುಗದಲ್ಲಿ ಹೇಗೆ ಮುನ್ನಡೆಯಬೇಕು ಎಂದು ಆಲೋಚಿಸಿ ಅವರನ್ನು ಸನ್ನದ್ಧರನ್ನಾಗಿ ಮಾಡಬೇಕಾಗಿದೆ. ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯಲ್ಲಿ ಉತ್ತಮ ಸಾಧನೆಯಾಗಬೇಕು. ಫಲಿತಾಂಶದ ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ಮಾಡಬೇಕು. ಹಿರಿಯರ ಮಾತುಗಳು ಮುಂದಿನ ಭವಿಷ್ಯಕ್ಕೆ ದಾರಿದೀಪವಾಗುತ್ತವೆ ಎಂದರು.
ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ಅವರ ಪ್ರಗತಿಗಾಗಿ ಶ್ರಮಿಸಬೇಕು ಎಂದರು.
ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂ.ಆರ್.ಶಿವಣ್ಣ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ನಗರ ಪ್ರದೇಶಗಳ ಮಕ್ಕಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಸಂಸ್ಥೆಯಲ್ಲಿ ಅಳವಡಿಸಿಕೊಂಡು ಮಕ್ಕಳನ್ನು ಭವಿಷ್ಯದ ಪ್ರಜೆಗಳನ್ನಾಗಿ ರೂಪಿಸಲಾಗುತ್ತಿದೆ. ಪೋಷಕರು ಅವರ ಪ್ರಗತಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದರು.
ಕಳೆದ ಸಾಲಿನಲ್ಲಿ ಹೆಚ್ಚಿನ ಅಂಕಗಳು ಗಳಿಸಿರುವ ಮಕ್ಕಳನ್ನು ಪುರಸ್ಕರಿಸಲಾಯಿತು. ವಿವಿಧ ಕ್ರೀಡಾಕೂಟಗಳು ಹಾಗೂ ವೇಷ ಭೂಷಣ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸಿ.ಎಂ.ದೇವರಾಜ್, ಎಂ.ಕೆ.ಚಂದ್ರಶೇಖರ್, ಲಕ್ಷ್ಮೀಪತಿ, ನಾರಾಯಣಸ್ವಾಮಿ, ನಾಗರಾಜ್, ಪಿ.ಯು.ಕಾಲೇಜಿನ ಪ್ರಾಂಶುಪಾಲ ಚಂದ್ರಕುಮಾರ್, ಆಂಗ್ಲಮಾದ್ಯಮ ಶಾಲೆಯ ಮುಖ್ಯಶಿಕ್ಷಕ ರಾಜೇಂದ್ರಬಾಬು, ಪ್ರೌಢಶಾಲೆಯ ಮುಖ್ಯಶಿಕ್ಷಕ ವೀರಭದ್ರಪ್ಪ, ಮುಖ್ಯಶಿಕ್ಷಕಿ ರಾಧಮ್ಮ ಹಾಜರಿದ್ದರು.

error: Content is protected !!