Home News ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು – ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು – ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ

0

ತಾಲ್ಲೂಕಿನ ವೈ ಹುಣಸೇನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವೈ.ಹುಣಸೇನಹಳ್ಳಿ ಎಸ್.ಎಫ್.ಸಿ.ಎಸ್ ಹಾಗೂ ಆನೇಮಡುಗು ವ್ಯವಸಾಯ ಸಹಕಾರ ಸಂಘದ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಹೊಸ ಸಮಾಜ ನಿರ್ಮಾಣ ಮಾಡಲು ಸಾಧ್ಯ, ಆ ನಿಟ್ಟಿನಲ್ಲಿ ತಾಲ್ಲೂಕಿನಾದ್ಯಂತ ಸುಮಾರು ಒಂದು ಲಕ್ಷ ಹೆಣ್ಣು ಮಕ್ಕಳಿಗೆ ಬಡ್ಡಿ ರಹಿತ ಸಾಲ ನೀಡಲು ಡಿಸಿಸಿ ಬ್ಯಾಂಕ್ ಈಗಾಗಲೇ ಚಾಲನೆ ನೀಡಿದೆ ಎಂದು ತಿಳಿಸಿದರು.
ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಬೇಕು ಎನ್ನುವ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ವತಿಯಿಂದ ಬಡ್ಡಿ ರಹಿತ ಸಾಲ ವಿತರಣೆ ಮಾಡಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ಪಡೆದುಕೊಂಡಲ್ಲಿ ಪಡೆದ ಸಾಲಕ್ಕೆ ಬಡ್ಡಿಯನ್ನು ಕಟ್ಟಬೇಕು, ಡಿಸಿಸಿ ಬ್ಯಾಂಕಿನಿಂದ ನೀಡುತ್ತಿರುವ ಸಾಲಕ್ಕೆ ಯಾವುದೇ ಬಡ್ಡಿಯಿಲ್ಲ.
ಹಾಗಾಗಿ ತಾವು ಪಡೆಯುವ ಸಾಲದ ಹಣವನ್ನು ನಿಗಧಿತ ಉದ್ದೇಶಕ್ಕೆ ಬಳಸಿಕೊಂಡಲ್ಲಿ ಸಾಲದ ಮರುಪಾವತಿ ಸುಲಭವಾಗುತ್ತದೆ ಎಂದರು.ಶಾಸಕ ವಿ.ಮುನಿಯಪ್ಪ ಮಾತನಾಡಿ, ಆರ್ಥಿಕ ಸಂಕಷ್ಟದ ನಡುವೆಯೂ ಡಿಸಿಸಿ ಬ್ಯಾಂಕಿನಿಂದ ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಿಗೆ ಒದಗಿಸುತ್ತಿರುವ ಬಡ್ಡಿರಹಿತ ಸಾಲವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.
ಈ ಸಂದರ್ಭದಲ್ಲಿ ವೈ ಹುಣಸೇನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ 12 ಮಹಿಳಾ ಸ್ವಸಹಾಯ ಸಂಘಗಳಿಗೆ 39 ಲಕ್ಷ 60 ಸಾವಿರ ಹಾಗೂ ಆನೇಮಡುಗು ವ್ಯವಸಾಯ ಸೇವಾ ಸಹಕಾರ ಸಂಘದ 9 ಸಂಘಗಳಿಗೆ 31 ಲಕ್ಷ 70 ಸಾವಿರ ಸಾಲ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಂ.ಜಯರಾಮರೆಡ್ಡಿ, ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್, ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಪ್ರಸಾದ್, ಎಸ್ ಎಫ್ ಸಿ ಎಸ್ ಅಧ್ಯಕ್ಷ ಬಸವರಾಜ್, ಉಪಾಧ್ಯಕ್ಷ ಕ್ಯಾತಣ್ಣ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಆನಂದ್, ವೈ ಹುಣಸೇನಹಳ್ಳಿ ಎಸ್‌ಎಫ್‌ಸಿಎಸ್ ಕಾರ್ಯನಿರ್ವಹಣಾಧಿಕಾರಿ ಅಕ್ಕಲಪ್ಪ, ಆನೇಮಡುಗು ಕಾರ್ಯ ನಿರ್ವಹಣಾಧಿಕಾರಿ ಸದಾಶಿವರೆಡ್ಡಿ, ಕೆ.ಎಂ.ವೆಂಕಟೇಶ್, ಸುಬ್ರಮಣಿ, ಹಾಜರಿದ್ದರು.

error: Content is protected !!