ನಗರ ಹಾಗೂ ಗ್ರಾಮೀಣ ಭಾಗದ ಮಹಿಳೆಯರು ಸ್ವ ಉದ್ಯೋಗ ನಿರ್ಮಿಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ವತಿಯಿಂದ ವಿಚಾರ ಸಂಕಿರಣ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ಗ್ರಾಮಾಭಿವೃದ್ದಿ ಯೋಜನೆಯ ನಿರ್ದೇಶಕ ರಾಧಾಕೃಷ್ಣ ರಾವ್ ಹೇಳಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರು ಪೇಟೆ ಸರ್ಕಾರಿ ಶಾಲೆಯ ಸಮುದಾಯ ಭವನದಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ವಲಯ ಮಟ್ಟದ ಸ್ವ ಉದ್ಯೋಗ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮಹಿಳೆಯರು ತಮ್ಮ ಮನೆಯಿಂದಲೇ ಅಲಂಕಾರಿಕ ವಸ್ತುಗಳನ್ನು ತಯಾರಿ ಮಾಡಿ ಆರ್ಥಿಕವಾಗಿ ಸಬಲರಾಗಬಹುದು. ಅದಕ್ಕೆ ಬೇಕಾದ ವಸ್ತುಗಳ ತಯಾರಿಗೆ ತರಬೇತಿ ಕಾರ್ಯ ಸೇರಿದಂತೆ ಅವಶ್ಯಕತೆ ಬಿದ್ದರೆ, ತಯಾರಿ ಮಾಡಿದ ವಸ್ತುಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆಯನ್ನು ಸಹ ಗ್ರಾಮಾಭಿವೃದ್ದಿ ಯೋಜನೆಯಿಂದ ಕಲ್ಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತ್ಯಾಜ್ಯ ರೇಷ್ಮೆಗೂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಬಗ್ಗೆ ಕಾರ್ಯಾಗಾರದಲ್ಲಿ ತಿಳಿಸಿಕೊಡಲಾಯಿತು.
ರೇಷ್ಮೆ ಕೃಷಿ ಮಹಾವಿದ್ಯಾಲಯದ ಪ್ರಾದ್ಯಾಪಕ ವಿಜಯೇಂದ್ರ ಅಲಂಕಾರಿಕ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಗುಂಪುಗಳಿಂದ ತಯಾರಿಸಲಾದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಅನಂದ್ ಮಾತನಾಡಿ ಮನೆಯ ಮಹಡಿಯ ಮೇಲೆ ತರಕಾರಿ ಕೃಷಿ ಮಾಡುವ ಬಗ್ಗೆ ಪ್ರಾತ್ಯಕ್ಷಿಕವಾಗಿ ವಿವರಣೆ ನೀಡಿ ಅದಕ್ಕೆ ಬೇಕಾದ ಪಾಲಿಥಿನ್ ಚೀಲ ಹಾಗು ತರಕಾರಿ ಗಿಡಗಳನ್ನು ವಿತರಿಸಿದರು.
ಕ್ಷೇತ್ರ ದರ್ಮಸ್ಥಳ ಗ್ರಾಮೀಣಾಬಿವೃದ್ದಿ ಯೋಜನೆಯ ಯೋಜನಾಧಿಕಾರಿ ಮೋಹನ್, ಕೃಷಿ ಇಲಾಖೆಯ ಮೇಲ್ವಿಚಾರಕ ಜನಾರ್ದನ, ಮೇಲ್ವಿಚಾರಕಿ ಮಮತ ಮತ್ತಿತರರು ಹಾಜರಿದ್ದರು.