Home News ಮಾತೃಪೂರ್ಣ ಯೋಜನೆ ಉದ್ದೇಶ ಈಡೇರಿಲ್ಲ

ಮಾತೃಪೂರ್ಣ ಯೋಜನೆ ಉದ್ದೇಶ ಈಡೇರಿಲ್ಲ

0

ಮಾತೃಪೂರ್ಣ ಯೋಜನೆಯ ಉದ್ದೇಶ ಫಲಕಾರಿಯಾಗುತ್ತಿಲ್ಲ. ಅದರ ಬದಲಿಗೆ ಇನ್ನೇನಾದರೂ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಾತೃ ಪೂರ್ಣ ಯೋಜನೆಯಡಿ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲೆ ಅಡುಗೆ ಮಾಡಿ ಬಡಿಸುವ ಮೂಲಕ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ. ಆದರೆ ಜನರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ, ಆದ್ದರಿಂದ ಯೋಜನೆಯ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.
ತಾಲ್ಲೂಕಿನ ಅಭಿವೃದ್ಧಿಗಾಗಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಸರ್ಕಾರದ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತಹ ಕೆಲಸ ಮಾಡಬೇಕು. ಬರುತ್ತಿರುವ ಅನುದಾನಗಳನ್ನು ಎಲ್ಲೆಲ್ಲಿ ಬಳಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಸದಸ್ಯರುಗಳು ತಮ್ಮ ಕ್ಷೇತ್ರಗಳಲ್ಲಿ ಪರಿಶೀಲನೆ ಮಾಡಿಕೊಳ್ಳಬೇಕು. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿನ ಸದಸ್ಯರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
೩೧ ಇಲಾಖೆಗಳ ಪೈಕಿ ೧೮ ಇಲಾಖೆಗಳ ಪ್ರತಿನಿಧಿಗಳು ಮಾತ್ರ ಭಾಗವಹಿಸಿದ್ದರು. ಉಳಿದ ೧೩ ಇಲಾಖೆಗಳು ಭಾಗವಹಿಸಿರಲಿಲ್ಲ, ನಗರಸಭೆ, ಪ್ರಾದೇಶಿಕ ಅರಣ್ಯ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೆ.ಎಸ್.ಆರ್.ಟಿ.ಸಿ, ಅಬಕಾರಿ ಇಲಾಖೆ, ಕಾರ್ಮಿಕ ಇಲಾಖೆ, ನಿರ್ಮಿತಿ ಕೇಂದ್ರ, ಪೊಲೀಸ್ ಇಲಾಖೆ, ಸೇರಿದಂತೆ ಹಲವಾರು ಇಲಾಖೆಗಳ ಅಧಿಕಾರಿಗಳು ಭಾಗವಹಿಸಿರಲಿಲ್ಲ.
ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್, ವ್ಯವಸ್ಥಾಪಕ ಪ್ರಸಾದ್, ಸದಸ್ಯರು, ಅಧಿಕಾರಿಗಳು ಹಾಜರಿದ್ದರು.