ಗ್ರಾಮೀಣ ಭಾಗದ ಜನರು ವಿವಿಧ ಸರ್ಕಾರಿ ಸೌಲಭ್ಯಕ್ಕಾಗಿ ತಾಲ್ಲೂಕು ಕೇಂದ್ರದವರೆಗೂ ಬರುವುದನ್ನು ತಡೆಯಲು ಹಾಗೂ ತ್ವರಿತವಾಗಿ ಕೆಲಸಗಳು ನಡೆಯಲು ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.
ಈ ಹಿಂದೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಯಾವುದೋ ಕೆಲಸ ಅರಿಸಿ ಬರುವವರ ಸಂಖ್ಯೆ ತೀರಾ ಕಡಿಮೆಯಾಗಿತ್ತು. ಆದರೆ ಇದೀಗ ಗ್ರಾಮ ಪಂಚಾಯಿತಿ ಕಾರ್ಯಲಯದಿಂದ ಕೋಟ್ಯಾಂತರ ರೂಗಳ ಕಾಮಗಾರಿಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ದೇಶದ ಜನತೆಯ ಶ್ರೇಯಸ್ಸಿಗಾಗಿ ಮಹತ್ತರ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತಂದಿವೆ. ಅವನ್ನು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದರು.
ತಹಶೀಲ್ದಾರ್ ಎಂ.ದಯಾನಂದ್ ಮಾತನಾಡಿ, ದೇಶದ ಅಭಿವೃದ್ಧಿಯಾಗಬೇಕಾದರೆ ಗ್ರಾಮಗಳ ಅಭಿವೃದ್ಧಿಯಾಗಬೇಕು ಎನ್ನುವ ಮಹಾತ್ಮ ಗಾಂಧೀಜಿಯವರ ಮಾತಿನಂತೆ ಇಂದು ದೇಶದ ಬಹುತೇಕ ಗ್ರಾಮಗಳು ಮಹಾತ್ಮ ಗಾಂಧಿ ಯೋಜನೆಯಡಿ ಅಭಿವೃದ್ಧಿಯೆಡೆಗೆ ಸಾಗುತ್ತಿವೆ. ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಾಗುತ್ತಿದೆ. ಗ್ರಾಮಸ್ಥರು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಳಿನಾ ಮಂಜುನಾಥ್, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್, ಎಸ್.ಎಂ.ನಾರಾಯಣಸ್ವಾಮಿ, ಪಿಡಿಓ ಹರೀಶ್, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.