Home News ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನಾಚರಣೆ

ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನಾಚರಣೆ

0

ರೋಗವನ್ನು ಆರಂಭದಲ್ಲೇ ಪತ್ತೆಹಚ್ಚಿ, ಸೂಕ್ತ ಚಿಕಿತ್ಸೆ ನೀಡದಿದ್ದರೆ ಡೆಂಗ್ಯೂ ಜ್ವರ ಮಾರಣಾಂತಿಕ ರೋಗವಾಗಿ ಪರಿಣಮಿಸಲಿದೆ ಹಾಗಾಗಿ ರೋಗ ಹರಡದಂತೆ ತಮ್ಮ ಸುತ್ತಲಿನ ವಾತಾವರಣ ಶುಚಿಯಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಡಾ.ವಿಜಯ್ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಶುಕ್ರವಾರ ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಡೆಂಗ್ಯೂ ಜ್ವರ ಈಡೀಸ್ ಜಾತಿಯ ಸೊಳ್ಳೆ ಕಚ್ಚುವಿಕೆಯಿಂದ ಬರುತ್ತದೆ. ಸಾಮಾನ್ಯವಾಗಿ ಈ ಸೊಳ್ಳೆಗಳು ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುವುದರಿಂದ ಹಗಲು ಹೊತ್ತಿನಲ್ಲಿ ಮಾತ್ರ ಕಚ್ಚುತ್ತದೆ. ಈ ಜಾತಿಯ ಸೊಳ್ಳೆ ಕಚ್ಚಿದ ವಾರದಲ್ಲಿ ರೋಗಕ್ಕೆ ತುತ್ತಾದವರಲ್ಲಿ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡಗಳಲ್ಲಿ ಮತ್ತು ಕೀಲುಗಳಲ್ಲಿ ವಿಪರೀತ ನೋವು, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸುತ್ತವೆ ಎಂದರು.
ಇದೊಂದು ಮಾರಣಾಂತಿಕ ರೋಗವಾಗಿದ್ದು ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷದಿ ಅಥವಾ ಲಸಿಕೆ ಇರುವುದಿಲ್ಲ, ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು. ಮುಖ್ಯವಾಗಿ ರೋಗ ಹರಡದಂತೆ ಮುನ್ನೆಚ್ಚರಿಕೆಯಾಗಿ ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ತೊಟ್ಟಿಗಳು, ಡ್ರಂ, ಬ್ಯಾರಲ್‍ಗಳು, ಏರ್ ಕೂಲರ್ ಇತ್ಯಾಧಿಗಳನ್ನು ವಾರಕೊಮ್ಮೆ ತಪ್ಪದೇ ಖಾಲಿ ಮಾಡಿ, ಒಣಗಿಸಿ ಪುನ: ನೀರು ಭರ್ತಿಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ರೋಗ ಬಂದವರು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಖಾಯಿಲೆ ಖಂಡಿತ ಗುಣಮುಖವಾಗುತ್ತದೆ, ರೋಗ ಬರುವುದಕ್ಕಿಂತ ಮೊದಲು ಜಾಗೃತರಾಗಿ ರೋಗ ಬರದಂತೆ ತಡೆಗಟ್ಟಿ ಎಂದು ಕರೆನೀಡಿದರು.
ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಕಿರಿಯ ಮಹಿಳಾ ಸಹಾಯಕಿಯರು, ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನಾಚರಣೆ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಜಾಗೃತಿ ಮೂಡಿಸುವ ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಡಾ.ಸುನೀತ, ಹಿರಿಯ ಆರೋಗ್ಯ ಸಹಯಕರಾದ ದಾದಾಪೀರ್, ಸಿ.ವಿಜಯಾ, ಮುನಿರತ್ನಮ್ಮ ಮತ್ತಿತರರು ಹಾಜರಿದ್ದರು.

error: Content is protected !!