ಭೂಸ್ವಾಧೀನ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಹತ್ತಿಕ್ಕುವ ನೀತಿಗಳನ್ನು ಜಾರಿ ಮಾಡುತ್ತಲೇ ಬಂದಿವೆ. ಕೇಂದ್ರ ಸರ್ಕಾರ ಈಗ ಜಾರಿ ಮಾಡಲು ಹೊರಟಿರುವ ಭೂಸ್ವಾಧೀನ ಕಾಯ್ದೆಯನ್ನು ಯಾವುದೇ ರೀತಿಯ ಚರ್ಚೆಯಿಲ್ಲದೇ, ಸಾಧಕ ಬಾಧಕಗಳನ್ನು ಪರಿಶೀಲಿಸದೇ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಹೊರಟಿರುವುದು ವಸಾಹತುಶಾಹಿಯ ಮಾದರಿಯಂತಿದೆ. ಇದು ಪ್ರಜಾಪ್ರಭುತ್ವದ ತತ್ವ ಹಾಗೂ ಮೌಲ್ಯಗಳನ್ನು ಧಿಕ್ಕರಿಸುವ ಸಂವಿಧಾನ ವಿರೋಧಿ ನೀತಿಯಾಗಿದೆ. ರೈತರ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ಹರಣ ಮಾಡುವ ರೈತರನ್ನು ದಮನ ಮಾಡುವ, ಬಂಡವಾಳಶಾಹಿಗಳಿಗೆ ಅನ್ನದಾತನ ಭೂಮಿಯನ್ನು ಕಸಿದುಕೊಡುವ ಈ ರೀತಿಯ ನೀತಿ ಮತ್ತು ಅದರ ಪರಿಣಾಮದ ಬಗ್ಗೆ ರಾಷ್ಟ್ರಪತಿಗಳೂ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿಯ ರೈತ ವಿರೋಧಿ ನೀತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡದಂತೆ ಮುಖ್ಯ ಮಂತ್ರಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ವೇಣುಗೋಪಾಲ್, ನಾರಾಯಣಸ್ವಾಮಿ, ಮುನಿಆಂಜಿನಪ್ಪ, ಅಬ್ಲೂಡು ಆರ್.ದೇವರಾಜ್, ಮಳಮಾಚನಹಳ್ಳಿ ದೇವರಾಜ್, ಶ್ರೀನಿವಾಸ್, ಕೃಷ್ಣಪ್ಪ, ಅಪ್ಪೇಗೌಡನಹಳ್ಳಿ ತ್ಯಾಗರಾಜ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.