ತಾಲ್ಲೂಕಿನ ವೈ.ಹುಣಸೇನಹಳ್ಳಿಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆರೋಗ್ಯ ಇಲಾಖೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್ ಮಾತನಾಡಿದರು.
ಜಿಲ್ಲೆಯಲ್ಲಿನ ವಿವಿಧ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ ರಕ್ತದ ಅವಶ್ಯಕತೆ ಇದ್ದು, ಅದಕ್ಕಾಗಿ ತಾಲ್ಲೂಕಿನ ಹಲವು ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸುತ್ತಿದ್ದೇವೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್ ಅವರು ತಿಲಿಸಿದರು.
ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯು ಶಿಬಿರ ಆಯೋಜನೆ ಸೇರಿದಂತೆ ವಿವಿಧ ಚಟುವಟಿಕೆಯಲ್ಲಿ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಹೆಚ್ಚು ಮಂದಿ ರಕ್ತದಾನಕ್ಕೆ ಮುಂದಾಗಬೇಕು. ಈ ಮೂಲಕ ರಕ್ತದ ಕೊರತೆ ನಿವಾರಣೆಗೆ ನೆರವಾಗಬೇಕು. ಯುವ ಸಮುದಾಯ ಈ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ ಮಾತನಾಡಿ, ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದಾಗಿದೆ. ಇಂತಹ ಮಹತ್ಕಾರ್ಯಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕಿದೆ. ರಕ್ತದಾನದ ಬಗ್ಗೆ ಹಲವರಲ್ಲಿ ತಪ್ಪು ಕಲ್ಪನೆ ಇದ್ದು, ಅರಿವು ಮೂಡಿಸಬೇಕಾದ ಅವಶ್ಯಕತೆ ಇದೆ. ಇದು ಆರೋಗ್ಯದ ಮೇಲೆ ಯಾವುದೆ ದುಷ್ಪರಿಣಾಮ ಬೀರುವುದಿಲ್ಲ. ರಕ್ತದಾನದಿಂದ ಉತ್ತಮ ಆರೋಗ್ಯ ಹೊಂದಬಹುದೆಂಬುದರ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು.
ವೈ.ಹುಣಸೇನಹಳ್ಳಿ ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥಪ್ರಸಾದ್, ಡಾ.ಮಾರುತಿನಂದನ್, ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಪ್ರಸಾದ್, ಪಿಡಿಒ ಸಿದ್ದಣ್ಣ, ಕೊತ್ತನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಪಿಡಿಒ ಅಶ್ವತ್ಥನಾರಾಯಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಡಾ.ಪ್ರಸಾದ್, ಆಸ್ಪತ್ರೆಯ ಸಿಬ್ಬಂದಿಗಳಾದ ಸಿದ್ದಾರ್ಥಿ, ಹನುಮಂತಗೌಡ, ನಳಿನ, ಪ್ರಯೋಗಶಾಲಾ ತಂತ್ರಜ್ಞ ಟಿ.ಟಿ.ನರಸಿಂಹಪ್ಪ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.