Home News ಶಿಕ್ಷಕ ವೃತ್ತಿಯನ್ನು ಆರಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಪ್ರೇರಕ

ಶಿಕ್ಷಕ ವೃತ್ತಿಯನ್ನು ಆರಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಪ್ರೇರಕ

0

ಉತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುವುದರಿಂದ ಶಿಕ್ಷಕರಿಗೆ ಪ್ರೋತ್ಸಾಹ ಮತ್ತು ಶಿಕ್ಷಕ ವೃತ್ತಿಯನ್ನು ಆರಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಪ್ರೇರಕವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ತಿಳಿಸಿದರು.
ಪಟ್ಟಣದ ನಗರೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ನಾಡಗೀತೆಗಳ ಗಾಯನ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಪಾಠ ಪ್ರವಚನ ಮಾಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿರುವ ಎಲ್ಲಾ ಸಲಹೆ, ಸೂಚನೆ ನೀಡುತ್ತಾ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ವಿದ್ಯಾರ್ಥಿಗಳ ವಿದ್ಯಾರ್ಥಿ ಜೀವನ ಉಜ್ವಲವಾಗುತ್ತದೆ. ಈ ದಿಸೆಯಲ್ಲಿ ಸರಕಾರ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸ ಮಾಡುತ್ತಿರುವುದರಿಂದ ಶಿಕ್ಷಕರಿಗೆ ಇನ್ನಷ್ಟು ಪ್ರೇರೆಪಣೆ ದೊರೆಯುತ್ತಿದೆ ಎಂದು ಹೇಳಿದರು.
ತಹಶಿಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ಈಗ ತುರ್ತಾಗಿ ಆಗಬೇಕಿರುವುದು ಕನ್ನಡ ಭಾಷೆಯನ್ನು ರಕ್ಷಿಸುವ ಕೆಲಸ. ನಮ್ಮ ಮಕ್ಕಳನ್ನು ಸಲಹಿದಂತೆ ಕನ್ನಡವನ್ನು ಸಲಹುವ ಜವಾಬ್ದಾರಿ ನಮ್ಮ ಮೇಲೆ ಇದೆ. ನಿಜವಾದ ಅರ್ಥದಲ್ಲಿ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸಲು ಸಾಧ್ಯವಾಗುವುದು ವಿದ್ಯಾರ್ಥಿಯ ಶಿಕ್ಷಣ ಹಂತದಲ್ಲಿ. ಕನ್ನಡವನ್ನು ಉಳಿಸಿ, ಬೆಳೆಸುವ ಭಾವನೆಗಳನ್ನು ಪರಿಣಾಮಕಾರಿಯಾಗಿ ತುಂಬುವುದು ಶಾಲಾ ಕಾಲೇಜುಗಳಲ್ಲಿ ಹೆಚ್ಚು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ಮಧುರಾ ಅವರನ್ನು ಸನ್ಮಾನಿಸಲಾಯಿತು. ಕನ್ನಡ ನಾಡಗೀತೆಗಳ ಗಾಯನ ಸ್ಪರ್ಧೆಯಲ್ಲಿ ನಾಡಗೀತೆಗಳನ್ನು ಸ್ಪರ್ಧಿಗಳು ಹಾಡಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕೃ.ನಾ.ಶ್ರೀನಿವಾಸಮೂರ್ತಿ, ಎಸ್.ವಿ.ನಾಗರಾಜರಾವ್, ಮುತ್ತೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಆಂಜಿನಪ್ಪ, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.