ದೇಶದ ಪ್ರತಿಯೊಂದು ಮಗುವಿಗೂ ಉತ್ತಮವಾದ ಶಿಕ್ಷಣ ಸಿಕ್ಕಿದಾಗ ಮಾತ್ರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದ ಹೋರಾಟಕ್ಕೆ ಅರ್ಥ ಬರುತ್ತದೆ ಎಂದು ಶಾಸಕ ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಮುಂಭಾಗ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ ರಾಂ ರವರ ೧೧೦ ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ಈ ದೇಶದ ಶೋಷಿತ ವರ್ಗದ ಮೇಲೆ ನಡೆಯುತ್ತಿದ್ದ ದೌರ್ಜನ್ಯ ದಬ್ಬಾಳಿಕೆಗಳು, ಶೋಷಣೆಯಿಂದಾಗಿ ನಿರಂತರವಾದ ಚಿಂತನೆಗಳನ್ನು ನಡೆಸಿದ ಡಾ.ಅಂಬೇಡ್ಕರ್ ಅವರು ದೇಶದ ಸಮಸ್ತ ಜನರಿಗೂ ನಿಜವಾದ ಸ್ವಾತಂತ್ರ್ಯ ಮತ್ತು ಉತ್ತಮ ಶಿಕ್ಷಣವನ್ನು ಕೊಡಿಸುವುದನ್ನು ಗುರಿಯನ್ನಾಗಿಸಿಕೊಂಡು ಸಂವಿಧಾನ ರಚಿಸಿದರು. ಎಲ್ಲಾ ವರ್ಗದವರಿಗೂ ಸಮಾನ ಹಕ್ಕು ನೀಡಬೇಕೆಂಬ ಉದ್ದೇಶದಿಂದ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿ, ಸಮಾಜದ ಏಳಿಗೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರತಿಪಾದಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಎನ್.ಎ. ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜನ್ಮ, ಬಾಲ್ಯ, ಸಂಕಷ್ಟದ ಬದುಕು, ಓದಬೇಕೆಂಬ ಅಭಿಲಾಷೆ, ಛಲ, ಗುರಿಯೆಡೆಗೆ ಸಾಧನೆ, ಬರೋಡಾದ ಮಹಾರಜರು ನೀಡಿದ ವಿದ್ಯಾರ್ಥಿವೇತನದ ಸಹಾಯದಿಂದ ವಿದೇಶದಲ್ಲಿ ಪದವಿಯನ್ನು ಪಡೆದು ಭಾರತಕ್ಕೆ ಹಿಂದಿರುಗಿ ಹಿಂದುಳಿದ ಜನಾಂಗಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸಲ್ಲಿ ನಿರತರಾದುದು ಮುಂತಾದ ವಿಷಯಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಸವಿಸ್ತಾರವಾಗಿ ತಿಳಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ರಾಂ ಅವರ ಭಾವ ಚಿತ್ರಗಳನ್ನು ಹೊತ್ತ ಮುತ್ತಿನ ಪಲಕ್ಕಿಗಳ ಮೆರವಣಿಗೆ ನಡೆಸಲಾಯಿತು. ವೀರಗಾಸೆ, ತಮಟೆ ವಾದನ ಜನರನ್ನು ಆಕರಷಿಸಿದವು.
ಈ ಸಂದರ್ಭದಲ್ಲಿ ಸೇನೆಯಲ್ಲಿ ಕಾರ್ಯನಿರ್ವಹಿಸಿರುವ ಆಂಜಿನಪ್ಪ, ಮುನಿಶಾಮಪ್ಪ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡ, ಪರಿಶಿಷ್ಟ ವರ್ಗದ ೪ ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ತಹಶೀಲ್ದಾರ್ ಅಜಿತ್ ಕುಮಾರ್ ರೈ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಮಾಜ ಕಲ್ಯಾಣ್ಯಾಧಿಕಾರಿ ಅನುಸೂಯಾದೇವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ, ದಲಿತ ಮುಖಂಡರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -