Home News ಸಹಕಾರ ಸಂಘಗಳು ಗಟ್ಟಿಗೊಳ್ಳಬೇಕು

ಸಹಕಾರ ಸಂಘಗಳು ಗಟ್ಟಿಗೊಳ್ಳಬೇಕು

0

ಸಹಕಾರ ಸಂಘಗಳು ಗ್ರಾಮೀಣ ಪ್ರದೇಶಗಳ ಜನರ ಆರ್ಥಿಕ ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗಿದ್ದು ಅವುಗಳ ಅಭಿವೃದ್ದಿಗಾಗಿ ಸಂಘದ ನಿರ್ದೇಶಕರೂ ಸೇರಿದಂತೆ ಗ್ರಾಮಸ್ಥರು ಶ್ರಮಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಬಂಕ್‌ಮುನಿಯಪ್ಪ ಹೇಳಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊರಕಾಯಲಹಳ್ಳಿ ಗ್ರಾಮದಲ್ಲಿ ಸೋಮವಾರ ನೂತನವಾಗಿ ನಿರ್ಮಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ ತೀವ್ರ ಬರಗಾಲಕ್ಕೆ ತುತ್ತಾಗಿರುವ ಬಯಲುಸೀಮೆಯ ಜಿಲ್ಲೆಗಳಲ್ಲಿನ ಜನರ ಜೀವನ ಮಟ್ಟ ಸುಧಾರಣೆಗಾಗಿ ಹೈನುಗಾರಿಕೆಯನ್ನು ಅವಲಂಬಿಸಿದ್ದು ಉತ್ಪಾದಕರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವ ಮೂಲಕ ಸಹಕಾರಿ ಸಂಘಗಳನ್ನು ಮತ್ತಷ್ಟು ಅಭಿವೃದ್ದಿ ಪಡಿಸಲು ಶ್ರಮಿಸಬೇಕು ಎಂದರು.
ಹಾಲು ಒಕ್ಕೂಟವು ಕೂಡಾ ಉತ್ಪಾದಕರಿಗೆ ಅನುಕೂಲವಾಗುವಂತೆ ಈಗಾಗಲೇ ಅನೇಕ ನೂತನ ಯೋಜನೆಗಳನ್ನು ಜಾರಿಗೆ ತಂದಿದ್ದು ಎಷ್ಟೇ ಹಾಲು ಉತ್ಪಾದನೆಯಾದರೂ ಕೂಡಾ ಮಾರುಕಟ್ಟೆಯ ಕೊರತೆಯಿಲ್ಲದಂತೆ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಿದೆ. ಇದೇ ಜೂನ್ ೧೬ ರಿಂದ ಸಾಮೂಹಿಕ ರಾಸು ವಿಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರೂ ತಮ್ಮ ತಮ್ಮ ರಾಸುಗಳಿಗೆ ವಿಮೆ ಮಾಡಿಸಿ ಎಂದರು.
ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿ, ಸಹಕಾರಿ ಸಂಘಗಳು ಅಭಿವೃದ್ಧಿಗೆ ಸೀಮಿತವಾಗಬೇಕು. ಯಾವುದೇ ಕಾರಣಕ್ಕೂ ಸಹಕಾರ ಸಂಘಗಳಲ್ಲಿ ರಾಜಕೀಯ ಬೆರೆಸದೇ ಒಗ್ಗಟ್ಟಾಗಿ ಸಹಕಾರಿ ಸಂಘದ ಏಳಿಗೆಗಾಗಿ ಶ್ರಮಿಸಬೇಕು. ಬೇಸಿಗೆಯಲ್ಲಿ ರಾಸುಗಳನ್ನು ನಿರ್ವಹಣೆ ಮಾಡುವುದು ಕಷ್ಟಕರವಾಗಿದ್ದರೂ ಕೂಡಾ ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆಗೆ ಬಯಲುಸೀಮೆ ಭಾಗದ ಮಹಿಳೆಯರು ಪಡುತ್ತಿರುವ ಶ್ರಮ ನಿಜಕ್ಕೂ ಪ್ರಶಂಸನೀಯ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮದ ೧೨ ಮಂದಿ ಫಲಾನುಭವಿಗಳಿಗೆ ಹಸು ಖರೀದಿಸಲು ಡಿಸಿಸಿ ಬ್ಯಾಂಕ್ ವತಿಯಿಂದ ೫೦ ಸಾವಿರ ರೂಗಳ ಚೆಕ್‌ಗಳನ್ನು ಗಣ್ಯರಿಂದ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸೊರಕಾಯಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ನರಸಿಂಹಯ್ಯ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ತುಮ್ಮನಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುರೇಂದ್ರ, ಮುಖಂಡರಾದ ತಾದೂರು ರಘು, ಕೋಚಿಮುಲ್ ಶಿಡ್ಲಘಟ್ಟ ಶಿಭಿರ ಘಟಕದ ಉಪವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ವಿಸ್ತರಣಾಧಿಕಾರಿಗಳಾದ ಮಂಜುನಾಥ್, ಶ್ರೀನಿವಾಸ್, ಸಂಘದ ಕಾರ್ಯನಿರ್ವಾಹಕ ಹರೀಶ್, ಹಾಲು ಪರೀಕ್ಷಕ ಮುನಿರಾಜು, ಗ್ರಾಮದ ಮುಖಂಡರಾದ ಸುರೇಶ್ ಹಾಜರಿದ್ದರು.