ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಕಾಮಗಾರಿಗಳು ಸಾರ್ವಜನಿಕರಿಗಾಗಿ ಎನ್ನುವ ಮನೋಭಾವದಿಂದ ಎಲ್ಲಾ ಗ್ರಾಮಸ್ಥರು ಗುಣಮಟ್ಟದ ಬಗ್ಗೆ ಕಾಳಜಿವಹಿಸಬೇಕಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ನಮಂಗಲ, ಕೆ.ಮುತ್ತುಕದಹಳ್ಳಿ ಹಾಗೂ ಚಿಂತಡಿಪಿ ಗ್ರಾಮಗಳಲ್ಲಿ ಎಸ್‌ಸಿಪಿ ಯೋಜನೆಯಡಿ ತಲಾ ೫ ಲಕ್ಷ ರೂಗಳ ಸಿಸಿ ರಸ್ತೆ ಕಾಮಗಾರಿಗಳಿಗೆ ಈಚೆಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಸಹಭಾಗಿತ್ವ ಸಂಪೂರ್ಣವಾಗಿ ಇದ್ದಾಗ ಮಾತ್ರವೇ ಸರ್ಕಾರದ ಯಾವುದೆ ಯೋಜನೆ ಯಶಸ್ವಿಯಾಗಲು ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೆ ಯೋಜನೆಯಾಗಲಿ ಯಶಸ್ಸು ಸಾಧ್ಯವಿಲ್ಲ ಎಂದರು.
ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು. ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸದೇ ಗ್ರಾಮಗಳಲ್ಲಿ ನಡೆಯುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಎಚ್ಚರವಹಿಸಬೇಕು ಎಂದರು.
ತಮ್ಮ ಅಧಿಕಾರಾವಧಿಯಲ್ಲಿ ತಾಲ್ಲೂಕಿನ ಶೇ. ೭೦ ರಷ್ಟು ಗ್ರಾಮಗಳಲ್ಲಿ ರಸ್ತೆ ಸೇರಿದಂತೆ ಕುಡಿಯುವ ನೀರಿಗೆ ಅಗತ್ಯವಾದ ಕ್ರಮ ಕೈಗೊಂಡಿದ್ದೇನೆ. ಉಳಿದ ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಂಕ್ ಮುನಿಯಪ್ಪ, ತನುಜಾರಘು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಸದಸ್ಯ ರಾಜಶೇಖರ್, ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಮ್ಮ, ಉಪಾಧ್ಯಕ್ಷ ಎಂ.ಸುರೇಂದ್ರ, ಸದಸ್ಯ ದ್ಯಾವಪ್ಪ, ಮುಖಂಡರಾದ ಚಿಕ್ಕ ಆಂಜಿನಪ್ಪ, ಮಾರುತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.