ತಾಲ್ಲೂಕು ಆಡಳಿತದಿಂದ ಈ ಭಾರಿಯ ೭೩ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ಎಂ.ದಯಾನಂದ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ, ಡಿ.ದೇವರಾಜ ಅರಸು ಜಯಂತಿ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತೀಯ ಸಂವಿದಾನದಡಿ ಸರ್ಕಾರಿ ಹುದ್ದೆಯಲ್ಲಿರುವ ಪ್ರತಿಯೊಬ್ಬ ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಯೂ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಸರ್ಕಾರಿ ರಜೆಯಿದೆ ಎಂಬ ಕಾರಣಕ್ಕೆ ಕುಟುಂಬದವರ ಹಾಗೂ ಸ್ನೇಹಿತರ ಜೊತೆ ಪ್ರವಾಸ ಹೋಗುವುದು ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು. ತುರ್ತು ಸಾವು ನೋವುಗಳು ಸಂಭವಿಸದ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಅಧಿಕಾರಿ ಕಾರ್ಯಕ್ರಮಕ್ಕೆ ಗೈರು ಹಾಜರಾದಲ್ಲಿ ಅಂತಹ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಗುವುದು. ಹಾಗಾಗಿ ಯಾರೊಬ್ಬರೂ ಗೈರು ಹಾಜರಾಗದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ತಾಲ್ಲೂಕಿನ ವಿವಿಧ ಇಲಾಖೆಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಲವು ಜವಾಬ್ದಾರಿಗಳನ್ನು ವಹಿಸಿದ ಅವರು ಆಗಸ್ಟ್ ೧೪ ರ ರಾತ್ರಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುವುದರೊಂದಿಗೆ ಬೆಳಗ್ಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಧ್ವಜಾರೋಹಣ ನೆರವೇರಿಸಿ ನಂತರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುವ ನಗರದ ನೆಹರೂ ಕ್ರೀಡಾಂಗಣಕ್ಕೆ ಎಲ್ಲರೂ ಹಾಜರಾಗುವಂತೆ ಮನವಿ ಮಾಡಿದರು.
ಆಗಸ್ಟ್ ೧೫ ರಂದು ಬೆಳಗ್ಗೆ ೯ ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ದ್ವಜಾರೋಹಣ ನಡೆಸುವುದರೊಂದಿಗೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲು ನಿರ್ಧರಿಸಲಾಯಿತು.
ಇದೇ ಆಗಸ್ಟ್ ೨೦ ರ ಮಂಗಳವಾರ ಬೆಳಗ್ಗೆ ೧೧ ಗಂಟೆಗೆ ಡಿ.ದೇವರಾಜ ಅರಸು ಜಯಂತಿ ಹಾಗೂ ಆಗಸ್ಟ್ ೨೩ ರ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಶ್ರೀ ಕೃಷ್ಣ ಜಯಂತಿಯನ್ನು ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಗ್ರಾಮಾಂತರ ಠಾಣೆ ಪಿಎಸ್ಸೈ ಹರೀಶ್, ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಹಾಜರಿದ್ದರು.
- Advertisement -
- Advertisement -
- Advertisement -