ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ವಚ್ಚತೆ ಕಾಪಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಸ್ವಚ್ಚ ಭಾರತ್ ಯೋಜನೆಯಡಿ ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಗ್ರಾಮ ಸ್ವಚ್ಚತಾ ಕಾರ್ಯಕ್ರಮದ ವೀಕ್ಷಣೆಗಾಗಿ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲದುಮ್ಮನಹಳ್ಳಿ ಮತ್ತು ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕದಿರಿನಾಯಕನಹಳ್ಳಿ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಗ್ರಾಮದ ಪರಿಸರ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಈ ಬಗ್ಗೆ ಅಧಿಕಾರಿಗಳು ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಬೇಕು. ಮಕ್ಕಳಿಗೆ ಶೌಚಾಲಯದ ಪ್ರಾಮುಖ್ಯತೆಯನ್ನು ತಿಳಿಸುವ ಜೊತೆಗೆ ಆರೋಗ್ಯ ಕಾಪಾಡಲು ಸ್ವಚ್ಚತೆ ಅತ್ಯವಶ್ಯಕ ಎಂಬುದನ್ನು ಮನದಟ್ಟು ಮಾಡಿಕೊಡಬೇಕು ಎಂದರು.
ಗ್ರಾಮೀಣ ಪ್ರದೇಶದ ಜನತೆಗೆ ಶುದ್ದ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು ಘಟಕಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಅಧಿಕಾರಿಗಳು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು. ಶುದ್ದ ಕುಡಿಯುವ ನೀರಿನ ಘಟಕಗಳ ಸುತ್ತಲೂ ಸ್ವಚ್ಚತೆ ಕಾಪಾಡುವಲ್ಲಿ ಗ್ರಾಮಸ್ಥರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಎಂ.ವೆಂಕಟೇಶ್, ಸಹಾಯಕ ನಿರ್ದೇಶಕ ಶ್ರೀನಾಥಗೌಡ ಹಾಜರಿದ್ದರು.
- Advertisement -
- Advertisement -
- Advertisement -
- Advertisement -