Home News ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಚಾಲನೆ

ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಚಾಲನೆ

0

ತಾಲ್ಲೂಕು ಆಡಳಿತದಿಂದ ಕೆರೆ ಒತ್ತುವರಿ ತೆರವುಗೊಳಿಸಲಾಗಿರುವ ತಾಲ್ಲೂಕಿನ ಮಳಮಾಚನಹಳ್ಳಿ ಹಾಗೂ ಹಿರೇಬಲ್ಲ ಕೆರೆಗಳ ಸಮಗ್ರ ಅಭಿವೃದ್ಧಿಗೆ ನರೇಗಾ ಯೋಜನೆಯಡಿ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಇಓ ಶಿವಕುಮಾರ್ ಮಾತನಾಡಿದರು.
ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾಮಗಾರಿಗಳನ್ನು ಮಾಡಿದಲ್ಲಿ ಗ್ರಾಮಗಳು ಮತ್ತಷ್ಟು ಅಭಿವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಗ್ರಾಮೀಣ ಭಾಗದ ಅಭಿವೃದ್ಧಿಯ ಹಿತದೃಷ್ಠಿಯಿಂದ ಕೇಂದ್ರ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮದ ರೈತರೂ ಹಾಗೂ ಬಡ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸವನ್ನು ನೀಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದುವರೆಯಬೇಕು ಎಂದರು.
ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಮಾತನಾಡಿ, ಗ್ರಾಮೀಣ ಭಾಗಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ನೀರೊದಗಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಎಚ್.ಎನ್ ವ್ಯಾಲಿ ನೀರು ತಾಲ್ಲೂಕಿನ ಕೆರೆಗಳಿಗೆ ಬರುವ ಹಿನ್ನಲೆಯಲ್ಲಿ ಈಗಾಗಲೇ ತಾಲ್ಲೂಕಿನಾದ್ಯಂತ ಇರುವ ಕೆರೆ, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಬರುವ ನೀರನ್ನು ಸಂಗ್ರಹಿಸಲು ಗ್ರಾಮೀಣ ಪ್ರದೇಶಗಳಲ್ಲಿರುವ ಕೆರೆಗಳ ಹೂಳೆತ್ತಲು ಉದ್ಯೋಗಖಾತ್ರಿ ಯೋಜನೆಯಡಿ ಅವಕಾಶವಿದ್ದು ಸ್ಥಳೀಯರೂ ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಸಿ.ಎಸ್.ಶ್ರೀನಾಥಗೌಡ ಮಾತನಾಡಿ, ಉದ್ಯೋಗಖಾತ್ರಿ ಯೋಜನೆಯ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸುವ ಕೆಲಸವನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾಡಬೇಕು. ಇದರಿಂದ ಗ್ರಾಮೀಣ ಭಾಗದ ಜನರು ನರೇಗಾ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದರು.
ಹೊಸಪೇಟೆ ಗ್ರಾಮ ಪಂಚಾಯಿತಿ ಪಿಡಿಓ ಕೆ.ಎಸ್.ಮಧು ಹಾಜರಿದ್ದರು.